ಮಹದೇಶ್ವರ ಬೆಟ್ಟದಲ್ಲಿ 21 ರಂದು ಸಾಮೂಹಿಕ ವಿವಾಹ
ಸಂಜೆವಾಣಿ ವಾರ್ತೆ
ಹನೂರು ಆ 19 :- ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸಚಿವರು ಸೇರಿದಂತೆ ಗಣ್ಯರು ಆಗಮಿಸಲಿದ್ದು ಮುಖ್ಯ ರಸ್ತೆ ಮಾರ್ಗವಾಗಿ ಗುಂಡಿಗಳಿಗೆ ಹಾಕಲಾಗುತ್ತಿರುವ ತೇಪೆ ಕಾಮಗಾರಿಯನ್ನು ಶಾಸಕ ಎಂ.ಆರ್.ಮಂಜುನಾಥ್ ಪರಿಶೀಲಿಸಿದರು.
ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಗುಂಡಿ ಬಿದ್ದಿರುವ ರಸ್ತೆಗೆ ತೇಪೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪರಿಶೀಲನೆ ನಡೆಸಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಗುಣಮಟ್ಟದ ಕಾಮಗಾರಿ ನಡೆಸುವಂತೆ ನೋಡಿಕೊಳ್ಳಬೇಕು ಎಂದು ಗುತ್ತಿಗೆದಾರನಿಗೆ ಸೂಚನೆ ನೀಡಿದರು.
ಇದೇ ತಿಂಗಳು 21 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಇಂದು ಮಲೈ ಮಹದೇಶ್ವರದ ನಾಗಮಲೆ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದ ಶಾಸಕರು ಮಾಹಿತಿ ಪಡೆದರು.
ಸಾಮೂಹಿಕ ವಿವಾಹ ಹಿನ್ನೆಲೆ ಕಾರ್ಯಕ್ರಮಕ್ಕೆ ಬರುವ ವಧು-ವರರು ಮತ್ತು ಕುಟುಂಬದವರಿಗೆ ಬೇಕಾದ ಕೊಠಡಿ ಮೂಲಭೂತ ಸೌಲಭ್ಯಗಳನ್ನು ಮಾಡಬೇಕು. ಮಲೆ ಮಾದೇಶ್ವರ ಸ್ವಾಮಿಯ ದರ್ಶನ ವ್ಯವಸ್ಥೆ ಕಲ್ಪಿಸಬೇಕು.
ಮಾದೇಶ್ವರ ಸ್ವಾಮಿ ರಾಜಗೋಪುರದ ಎದುರುಗಡೆ ಇರುವ ರಂಗಮಂದಿರದಲ್ಲಿ ನಡೆಯುವ ಸಾಮೂಹಿಕ ವಿವಾಹ ಬೃಹತ್ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಕಲ್ಪಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಲೈ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.