ರಾಜ್ಯಪಾಲರ ವಿರುದ್ದ ಕಿಡಿಕಾರಿದಕರ್ನಾಟಕ ಮುಸ್ಲಿಂ ಯುನಿಟಿ
(ಸಂಜೆವಾಣಿ ವಾರ್ತೆ)
ಬಳ್ಳಾರಿ:ಅ,18- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯು ರಾಜಕೀಯ ಪ್ರೇರಿತವಾಗಿ ಮಾಡಿರುವ ಸುಳ್ಳು ಆರೋಪವನ್ನೇ ಆಧಾರವಾಗಿಟ್ಟುಕೊಂಡು, ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ವಾಗಿದೆ. ಇದನ್ನು ಕರ್ನಾಟಕ ಮುಸ್ಲಿಂ ಯುನಿಟಿ (ಕೆ.ಎಂ.ಯು) ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ಮುಸ್ಲಿಂ ಯುನಿಟಿ (ಕೆ.ಎಂ.ಯು) ಬಳ್ಳಾರಿ ಅಧ್ಯಕ್ಷ ಬಿ.ಎಂ.ರಫಿ ಅವರು.ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗಾಣಿಸಬಹುದು, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಭವಿಷ್ಯದಲ್ಲಿ ಕರ್ನಾಟಕದ ರಾಜಕಾರಣದಿಂದ ಹಿಂದುಳಿದ ವರ್ಗಗಳನ್ನು ಅಧಿಕಾರದಿಂದ ದೂರ ಇಡಬಹುದು ಮತ್ತು ಸಿದ್ದರಾಮಯ್ಯರವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಆ ಮೂಲಕ ರಾಜ್ಯದ ಸಮಸ್ತ ಹಿಂದುಳಿದ ವರ್ಗಗಳು ಅಧಿಕಾರ ನಡೆಸಲು ಅಸಮರ್ಥರು ಎಂದು ಬಿಂಬಿಸಬಹುದು ಎನ್ನುವ ಹುನ್ನಾರದಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಮತ್ತು ವಾಲ್ಮೀಕಿ ನಿಗಮದ ವಿವಾದದಲ್ಲಿ ಅವರ ಹೆಸರನ್ನು ತಳಕು ಹಾಕಲಾಗುತ್ತಿದೆ; ಇದು ಖಂಡನೀಯ. ಅಲ್ಲದೆ ಇದು ಕೋಮುವಾದಿ ರಾಜಕೀಯದ ಭಾಗವೇ ಆಗಿದೆ” ಎಂದು ಅವರು ಕಿಡಿಕಾರಿದ್ದಾರೆ.