ಸಿಎಂ ರಾಜೀನಾಮೆ ನೀಡಲಿ
ಹುಬ್ಬಳ್ಳಿ, ಆ 17: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ ಬರುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕು. ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹ ಮಾಡಿದ್ದೇವೆ ಎಂದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಿನಲ್ಲಿ 14 ಸೈಟ್‍ಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳಿವೆ. ಕಾನೂನು ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ರಾಜ್ಯದ ಸಿಎಂ ಜವಾಬ್ದಾರಿ ಹುದ್ದೆಯಲ್ಲಿದ್ದರೂ ಈ ರೀತಿಯಾಗಿ ನಡೆದುಕೊಂಡಿದ್ದು ಅವರಿಗೆ ಶೋಭೆಯಲ್ಲ. ಕಾನೂನು ಬಾಹೀರವಾಗಿ ನಡೆದುಕೊಂಡಿದ್ದರೆ ಕ್ರಮ ಕೈಗೊಳ್ಳಬೇಕು. ಆ ಹಿನ್ನೆಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ ಎಂದು ಹೇಳಿದರು.
ಇದೀಗ ರಾಜ್ಯಪಾಲರ ನಿರ್ಧಾರವನ್ನು ಚಾಲೆಂಜ್ ಮಾಡುವುದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟ ವಿಚಾರ. ಆದರೆ ರಾಜ್ಯಪಾಲರ ನಿರ್ಧಾರ ಪ್ರಶ್ನೆ ಮಾಡುವುದು ಸರಿಯಲ್ಲ ಎಂದರು.
ರಾಜ್ಯಪಾಲರು ಕೇಂದ್ರ ಸರ್ಕಾರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಹಿಂದೆ ಭಾರದ್ವಾಜ್ ಅವರು ರಾಜ್ಯಪಾಲರಾಗಿದ್ದಾಗ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಲಾಗಿತ್ತು. ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ರಾಜ್ಯಪಾಲರು ಅಗತ್ಯವಾದ ಕ್ರಮ ಕೈಗೊಳ್ಳತ್ತಾರೆ. ಇದನ್ನು ರಾಜಕೀಕರಣಗೊಳಿಸುವುದು ಸರಿಯಲ್ಲ ಎಂದು ಹೇಳಿದರು.
ಆರ್ಕಾವತಿ ಹಗರಣದಲ್ಲಿಯೇ ಸಿದ್ದರಾಮಯ್ಯ ಸಿಎಂ ಹುದ್ದೆಗೆ ರಾಜೀನಾಮೆ ಕೊಡಬೇಕಿತ್ತು. ನ್ಯಾಯಮೂರ್ತಿ ಕೆಂಪಣ್ಣ ಆಯೋಗ ವರದಿ ನೀಡಿದೆ. ಆದರೆ ಈವರೆಗೆ ವರದಿ ಬಹಿರಂಗವಾಗಿಲ್ಲ. ಸಿದ್ದರಾಮಯ್ಯ ಸದನದಲ್ಲಿ ವರದಿ ಬಹಿರಂಗಗೊಳಿಸಿ ತಾವು ಸಾಚಾ ಎಂಬುದನ್ನು ತೋರಿಸಲಿ ಎಂದು ಒತ್ತಾಯಿಸಿದರು.