ಮಹಿಳಾ ವೈದ್ಯೆ ಹತ್ಯೆ ಖಂಡಿಸಿ ಪ್ರತಿಭಟನೆ
ಸಂಜೆವಾಣಿ ನ್ಯೂಸ್
ಮೈಸೂರು: ಆ.17:- ಕೋಲ್ಕತ್ತಾದ ಆರ್.ಜೆ.ಕರ್ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವತಿಯಿಂದ ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಆರ್.ಜೆ.ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯನ್ನು ಕಿಡಿಕೇಡಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯಿಂದ ರಾತ್ರಿ ಕರ್ತವ್ಯ ಮತ್ತು ತುರ್ತು ವಿಭಾಗದ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಸುರಕ್ಷತೆಯ ಆತಂಕ ತಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರುಗಳ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಅಲ್ಲಿ ಪ್ರತಿಭಟನೆ ನಡೆಸುವವರಿಗೆ ರಕ್ಷಣೆ ಇಲ್ಲದಂದಾಗಿದೆ. ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದು, ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಮಹತ್ವ ಕೊಡಬೇಕು. ವೈದ್ಯೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ಡಾ.ಮನೀಷ್ ನಾಯಕ್ ಸೇರಿದಂತೆ ಹಲವರು ಭಾಗವಹಿಸಿದ್ದರು.