ಹಲವಾರು ರಾಷ್ಟ್ರ ನಾಯಕರ, ದೇಶಪ್ರೇಮಿಗಳ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ: ಸಚಿವ ಕೆ. ವೆಂಕಟೇಶ್
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.16- ಸ್ವಾತಂತ್ರ್ಯ ನಮಗೆ ಅಷ್ಟೇನು ಸುಲಭವಾಗಿ ದೊರೆತಿಲ್ಲ. ಹಲವಾರು ರಾಷ್ಟ್ರ ನಾಯಕರ, ದೇಶಪ್ರೇಮಿಗಳ ತ್ಯಾಗ, ಬಲಿದಾನದಿಂದ ಸಿಕ್ಕಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಭಾಗಿಯಾಗಿರುವ ನಾವೆಲ್ಲರೂ 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದೇವೆ. ಸ್ವಾತಂತ್ರ್ಯ ನಮಗೆ ಅಷ್ಟೇನು ಸುಲಭವಾಗಿ ದೊರೆತಿಲ್ಲ. ಅದು ಹಲವಾರು ರಾಷ್ಟ್ರ ನಾಯಕರ, ದೇಶಪ್ರೇಮಿಗಳ ತ್ಯಾಗ, ಬಲಿದಾನದಿಂದ ಸಿಕ್ಕಿದೆ. ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತದಲ್ಲಿ ಭಾವೈಕ್ಯತೆಯನ್ನು ಸಾಧಿಸುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲಿರುವ ವಿಪುಲ ಅವಕಾಶಗಳನ್ನು ಬಳಸಿಕೋಂಡು ದೇಶದ ಸರ್ವಾಂಗೀಣ ಪ್ರಗತಿಗೆ ನೆರವಾಗೋಣ ಎಂದು ಸಚಿವರು ಹೇಳಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ಪಶುವೈದ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲು ಪ್ರತಿ ಕಟ್ಟಡಕ್ಕೆ 50 ಲಕ್ಷ ರೂ. ಗಳಂತೆ 450 ಲಕ್ಷ ಅನುದಾನವನ್ನು ಒದಗಿಸಲಾಗಿದೆ. ಜಿಲ್ಲೆಯ ಸಂತೇಮರಹಳ್ಳಿ, ಮಲಿಯೂರು, ಕೊತ್ತಲವಾಡಿ, ಹೊನ್ನೇಗೌಡನಹಳ್ಳಿ, ತೆರಕಣಾಂಬಿ, ಕಬ್ಬಳ್ಳಿ, ರಾಮಾಪುರ, ಮಹದೇಶ್ವರ ಬೆಟ್ಟ, ಯಳಂದೂರಿನಲ್ಲಿ ಪಶು ವೈದ್ಯ ಕಟ್ಟಡಗಳನ್ನು ನಿರ್ಮಿಸಲಾಗುವುದು. ಅನುಗ್ರಹ ಕೊಡುಗೆ ಯೋಜನೆಯಡಿ ಅಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ 10 ಸಾವಿರ ಹಾಗೂ ಕುರಿಮೇಕೆಗಳಿಗೆ 5 ಸಾವಿರ ರೂ. ಗಳ ಪರಿಹಾರ ನೀಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ರೈತ ಮಹಿಳೆಯರಲ್ಲಿ ಹೈನುಗಾರಿಕೆ ಪ್ರೋತ್ಸಾಹಿಸಲು 2024-25ನೇ ಸಾಲಿನಲ್ಲಿ ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಶೇ. 6ರ ಬಡ್ಡಿದರದಲ್ಲಿ ಸಹಾಯಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಅದರನ್ವಯ ಪರಿಶಿಷ್ಟ ಜಾತಿ-11, ಪರಿಶಿಷ್ಟ ಪಂಗಡ-4 ಹಾಗೂ ಸಾಮಾನ್ಯ-47 ಸೇರಿದಂತೆ ಜಿಲ್ಲೆಗೆ ಒಟ್ಟು 62 ಗುರಿ ನಿಗದಿಪಡಿಸಲಾಗಿದೆ ಎಂದು ಸಚಿವ ವೆಂಕಟೇಶ್ ಅವರು ತಿಳಿಸಿದ ಅವರು, ಸಮಾರಂಭದಲ್ಲಿ ನೆರೆದಿದ್ದ ಎಲ್ಲರಿಗೂ ಸ್ವಾತಂತ್ರೋತ್ಸವದ ಶುಭಾಷಯಗಳನ್ನು ತಿಳಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.ಅದಕ್ಕೂ ಮೊದಲು ತೆರದ ವಾಹನದಲ್ಲಿ ತೆರಳಿದ ಸಚಿವರು ಪಥಸಂಚಲನಕ್ಕೆ ಸಜ್ಜಾಗಿದ್ದ ವಿವಿಧ ತುಕಡಿಗಳಿಗೆ ಗೌರವ ವಂದನೆ ಸಲ್ಲಿಸಿದರು.
ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಚಕ ದಳ ತುಕಡಿಗಳು ಸೇರಿದಂತೆ ವಿವಿಧ ಶಾಲಾ ಮಕ್ಕಳು ಅಕರ್ಷಕ ಪಥಸಂಚಲನದಲ್ಲಿ ಪಾಲ್ಗೊಂಡರು.
ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರು ರಾಷ್ಟ್ರ ನಾಯಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ನಂತರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಸೇವಾಭಾರತಿ ಶಾಲೆ, ಯುನಿವರ್ಸ್ ಆಂಗ್ಲ ಮಾಧ್ಯಮ ಶಾಲೆ, ಜೆ.ಎಸ್.ಎಸ್. ಪ್ರೌಢಶಾಲೆ, ಹಾಗೂ ಸಂತ ಜೋಸೆಫರ ಶಾಲಾ ತಂಡಗಳು ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟವು. ಅದರಲ್ಲೂ ನಗರದ ಜೆ.ಎಸ್.ಎಸ್. ಪ್ರೌಢಶಾಲೆ ಪ್ರಸ್ತುತಪಡಿಸಿದ ಸಂಗೊಳ್ಳಿ ರಾಯಣ್ಣ ಹಾಗೂ ಸಂತ ಜೋಸೆಫರ ಶಾಲೆಯ ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಕುರಿತ ನೃತ್ಯ ರೂಪಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ 6 ಮಂದಿ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಉಚಿತ ಲ್ಯಾಪ್‍ಟಾಪ್ ವಿತರಿಸಲಾಯಿತು. ಅಲ್ಲದೆ ಅಪಘಾತದಲ್ಲಿ ಮೃತಪಟ್ಟವರ ಅಂಗಾಂಗ ದಾನ ಮಾಡಿದ ಸಂಬಂಧಿಸಿದ 7 ಕುಟುಂಬದ ಸದಸ್ಯರಿಗೆ, ಪೋಷಕರಿಗೆ ಮತ್ತು ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಯಲ್ಲಿ ಪ್ರಾಣದ ಹಂಗು ತೊರೆದು ಉತ್ತಮ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಅಧಿಕಾರಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸಂಸದ ಸುನಿಲ್ ಬೋಸ್, ಶಾಸಕ ಸಿ. ಪುಟ್ಟರಂಗಶೆಟ್ಟಿ, ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಪಂಚ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮೀ, ತಹಶೀಲ್ದಾರ್ ಗಿರಿಜ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೂ ಮೊದಲು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಧ್ವಜಾರೋಹಣ ನೆರವೇರಿಸಿದರು. ಎಲ್ಲಾ ಅಧಿಕಾರಿ, ನೌಕರರಿಗೂ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ತಿಳಿಸಿದರು. ಬಳಿಕ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.