ಪಿ.ಒ.ಪಿ , ರಾಸಾಯನಿಕ ಗುಣಗಳ್ಳುಳ ಗಣೇಶ ವಿಗ್ರಹಗಳ ಬಳಕೆ ನಿಷೇಧ
ಕೋಲಾರ, ಆ,೧೫-ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ವಿರ್ಸಜನೆಯನ್ನು ನಿಷೇಧಿಸುವ ಕುರಿತು ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಭಾರಲೋಹ ವಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ವಿಗ್ರಹಗಳ ಬಳಕೆ ಹಾಗೂ ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದ್ದು ಮತ್ತು ಮಾರಾಟ ಮಾಡುವವರ ವಿರುದ್ಧ ಕಾಯ್ದೆಯನುಸಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕುವಾರು ಸಮಿತಿ ರಚಿಸಿ ಮುಂದಿನ ಕ್ರಮ ವಹಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಆದೇಶಿಸಿದ್ದಾರೆ.
ಮುಂಬರುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ವಿಸರ್ಜಿಸುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪರ ಲೈಸನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸುವುದು.
ಸಾರ್ವಜನನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ ೧೦ ರಿಂದ ಬೆಳಿಗ್ಗೆ ೬. ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು ಎಂದು ತಿಳಿಸಿದ್ದಾರೆ.
ನಿರ್ದಿಷ್ಠ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಠ ಜಲಮೂಲಗಳನ್ನು ನಿಗಧಿಪಡಿಸುವುದು. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ಮೂರ್ತಿಗಳನ್ನು ತನಿಖೆ ಮಾಡಿ ಸುಪರ್ಧಿಗೆ ತೆಗೆದುಕೊಳ್ಳಲು ಕ್ರಮ ವಹಿಸುವುದು. ಸಾರ್ವಜನಿಕರಲ್ಲಿ ನಿಷೇದಿತ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ವಿಗ್ರಹಗಳ ಉತ್ಪಾದನೆ ಮತ್ತು ಬಳಕೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾರಿಗೆ ಇಲಾಖೆ ಅವರು ಜಿಲ್ಲೆಯ ಗಡಿ ಭಾಗಗಳಲ್ಲಿ ಹೊರ ರಾಜ್ಯಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ವಿಗ್ರಹಗಳು ಜಿಲ್ಲೆಗೆ ಬಾರದಂತೆ ತಡೆಯಲು ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.