ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ ಎಸ್‍ಎಫ್‍ಐ ಪ್ರತಿಭಟನೆ
ಕಲಬುರಗಿ,ಆ.14-ಬಿ.ಎ., ಬಿ.ಕಾಂ., ಬಿಎಸ್‍ಸಿ ಸೇರಿದಂತೆ ವಿವಿಧ ಪದವಿ ಕೋರ್ಸ್‍ಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.
ಬಿ.ಎ, ಬಿ.ಕಾಂ., ಬಿಎಸ್‍ಸಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಳೆದ ವರ್ಷಕ್ಕಿಂತ ಈ ವರ್ಷ ಸಾವಿರದಿಂದ, ಸಾವಿರದ ಐದನೂರುವರೆಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ಕಾರಣಕ್ಕಾಗಿ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.
ಎಸ್‍ಎಫ್‍ಐ ಜಿಲ್ಲಾ ಸಂಚಾಲಕಿ ಸುಜಾತಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಭಾಗವಹಸಿದ್ದರು.