ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕಿದೆ
ಬ್ಯಾಡಗಿ,ಆ.14: ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ನಾವೆಲ್ಲರೂ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ಅದಕ್ಕೆ ಬೇಕಾಗುವ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರವೂ ಬದ್ಧವಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ತಾಲೂಕಿನ ಹಿರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮುಖ್ಯಮಂತ್ರಿಯವರ ವಿಶೇಷ ಅನುದಾನದಡಿ 30 ಲಕ್ಷ ರೂಗಳ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಶ್ರಮಿಸಬೇಕು. ಸಮಾಜದಲ್ಲಿ ಶಿಕ್ಷಕರ ಮೇಲೆ ದೊಡ್ಡ ಜವಾಬ್ದಾರಿಯಿದ್ದು, ದೇಶದ ಏಳಿಗೆಗಾಗಿ ಶಿಕ್ಷಕರು ಮಕ್ಕಳಲ್ಲಿ ಶಿಸ್ತು ಬೆಳೆಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಶಿವನಗೌಡ ಪಾಟೀಲ, ತಾಲೂಕಾ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಮಂಜನಗೌಡ ಲಿಂಗನಗೌಡ್ರ, ಬಿ.ಎಂ.ಗೌರಾಪೂರ, ಎನ್.ಎಫ್.ಹರಿಜನ, ಕೊಟ್ರಯ್ಯ ಹಿರೇಮಠ, ಎಂ.ಎನ್.ಹುಬ್ಬಳ್ಳಿ, ಪ್ರವೀಣ ಅಗಸಿಮನಿ, ಬಿಇಓ ಎಸ್.ಜಿ.ಕೋಟಿ, ಭೂಸೇನಾ ನಿಗಮದ ಇಂಜನೀಯರ್ ಸಿದ್ದೇಶ, ಗುತ್ತಿಗೆದಾರ ಗಣೇಶ ಚಿಕ್ಕಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.