ಯಾವುದೇ ಬಾಕಿ ಕಾಮಗಾರಿ ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಸಚಿವ ರಹೀಂ ಖಾನ್ ಅಧಿಕಾರಿಗಳಿಗೆ ಸೂಚನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೧೪: ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಿ ಯಾವುದೇ ಬಾಕಿ ಕಾಮಗಾರಿಗಳನ್ನು ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವÀ ರಹೀಂ ಖಾನ್ ಅವರು ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಯಾವುದೇ ಕಾಮಗಾರಿಗಳನ್ನು ಬಾಕಿ ಉಳಿಸಿಕೊಳ್ಳದೇ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಎಸ್‌ಎಫ್‌ಸಿ ಯೋಜನೆ ಸೇರಿದಂತೆ ಬಾಕಿ ಇರುವ ವಿವಿಧ ಯೋಜನೆಗಳಡಿ ಕಾಮಗಾರಿಗಳನ್ನು ಟೆಂಡರ್ ಕರೆದು ಪೂರ್ಣಗೊಳಿಸಬೇಕು. ಕಾಮಗಾರಿ ಅನುಷ್ಠಾನದಲ್ಲಿ ಯಾವುದಾದರೂ ಸಣ್ಣ ಪುಟ್ಟ ತೊಂದರೆಗಳಿದಲ್ಲಿ ಆದ್ಯತೆ ಮೇಲೆ ನಿಮ್ಮ ಹಂತದಲ್ಲಿ ಪೂರ್ಣಗೊಳಿಸಬೇಕು. ಅಧಿಕಾರಿಗಳ ಹಂತದಲ್ಲಿ ಸಾಧ್ಯವಾಗದ ಯಾವುದಾದರೂ ತೊಂದರೆಗಳಿದ್ದಲ್ಲಿ ಮೇಲಾಧಿಕಾರಿಗಳ, ಉನ್ನತಾಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಶೀಘ್ರ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ವಹಿಸಬೇಕು. ಮಳೆಗಾಲವಿರುವುದರಿಂದ ಕುಡಿಯುವ ನೀರು ಪೂರೈಸುವ ಸಂದರ್ಭದಲ್ಲಿ ಕಡ್ಡಾಯವಾಗಿ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ ಪೂರೈಕೆ ಮಾಡಬೇಕು. ಈ ವಿಷಯದಲ್ಲಿ ನಿರ್ಲಕ್ಷö್ಯ ತೋರದೇ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕಾರ್ಯ ನಿರ್ವಹಿಸಬೇಕು. ಯಾವುದೇ ಲೋಪವಾದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಡೆಂಘೀ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತೆ ವಹಿಸಬೇಕು. ನೀರಿನಲ್ಲಿ ಉತ್ಪತ್ತಿಯಾಗುವ ಲಾರ್ವಾ ನಾಶಕ್ಕೆ ಕ್ರಮ ವಹಿಸಬೇಕು. ಕಾಲಕಾಲಕ್ಕೆ ಔಷಧ ಸಿಂಪಡಣೆ, ಧೂಮೀಕರಣ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟಿಟನಲ್ಲಿ ಮನೆ ಮನೆ ತ್ಯಾಜ್ಯ ಸಂಗ್ರಹಿಸುವ ವಾಹನಗಳಲ್ಲಿ ಧ್ವನಿವರ್ಧಕ ಮೂಲಕ ಡೆಂಘೀ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದ ಹಾಗೆ ನೋಡಿಕೊಳ್ಳಬೇಕು. ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಪ್ರತಿ ತಿಂಗಳು ಪುರಸಭೆ, ಪಟ್ಟಣ ಪಂಚಾಯತಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ, ಸಮಾಲೋಚನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಪೌg ಕಾರ್ಮಿಕರ ಗೃಹ ಭಾಗ್ಯ ಯೋಜನೆ, ೧೫ನೇ ಹಣಕಾಸು ಯೋಜನೆ, ನಗರೋತ್ಥಾನ, ಆಸ್ತಿ ತೆರಿಗೆ ಹಾಗೂ ನೀರಿನ ತೆರಿಗೆ ಸಂಗ್ರಹ ಕುರಿತು ಪರಿಶೀಲನೆ ನಡೆಸಿದ ಅವರು, ಇಂದಿರಾ ಕ್ಯಾಂಟೀನ್ ಹಂತ-೨ರ ಕಟ್ಟಡ ಪ್ರಗತಿಯ ಮಾಹಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಹುದ್ದೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವÀ ಡಾ. ಎಂ.ಬಿ. ಪಾಟೀಲ ಅವರು ಮಾತನಾಡಿ, ಬಬಲೇಶ್ವರ ಪಟ್ಟಣ ಪಂಚಾಯತ್ ವ್ಯಾಪ್ತಿ ವಿಸ್ತರಣೆಯ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಆದ್ಯತೆಯನುಸಾರ ಪರಿಗಣಿಸಿ ಮಂಜೂರು ಮಾಡಬೇಕು. ಅದರಂತೆ ಜಿಲ್ಲೆಯಾದ್ಯಂತ ಬಾಕಿ ಇರುವ ಪ್ರಸ್ತಾವನೆಗಳಿಗೆ ಶೀಘ್ರವೇ ಮಂಜೂರು ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಬೇಕು. ತ್ಯಾಜ್ಯ ನಿರ್ವಹಣೆ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಒದಗಿಸಬೇಕು ಎಂದು ಹೇಳಿದರು.
ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ ಅವರು, ಸಭೆಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ವಿಠಲ ಕಟಕದೊಂಡ, ಅಶೋಕ ಮನಗೂಳಿ, ನಗರಾಬಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲ್ ಹಮೀದ್ ಮುಶ್ರೀಫ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ, ಸಚಿವರ ಆಪ್ತ ಕಾರ್ಯದರ್ಶಿ ಕೆ. ಮುರಳಿಧರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.