ಸ್ವಾತಂತ್ರೋತ್ಸವ, ಹರ್ ಘರ್ ತಿರಂಗ ಅಭಿಯಾನ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.14- ಜಿಲ್ಲಾಡಳಿತದ ವತಿಯಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆ ಹಾಗೂ ಹರ್ ಘರ್ ತಿರಂಗ ಅಭಿಯಾನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಕೈಗೊಳ್ಳಲು ಎಲ್ಲಾ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಕೈಗೊಳ್ಳಲಾಗಿರುವ ಸಿದ್ದತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆಯಂದು ಪಥ ಸಂಚಲನ, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯದ ಹೋರಾಟದ ಮಹತ್ವ, ದೇಶಭಕ್ತಿ ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳು ಉತ್ತಮವಾಗಿ ಮೂಡಿ ಬರಬೇಕಿದೆ. ಈ ನಿಟ್ಟಿನಲ್ಲಿ ಅಂತಿಮ ತಾಲೀಮನ್ನು ನಡೆಸಲು ಮಾರ್ಗದರ್ಶನ ಮಾಡಿ ಸಿದ್ದಗೊಳಿಸಬೇಕು ಎಂದು ಜಿಲ್ಲಾಧಿಕಾರಿತಿಳಿಸಿದರು.
ಹರ್ ಘರ್ ತಿರಂಗ ಅಭಿಯಾನವನ್ನು ವ್ಯಾಪಕವಾಗಿ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ. ಪ್ರತಿ ಮನೆ ಮನೆಗಳಲ್ಲೂ, ಕಚೇರಿ ಸೇರಿದಂತೆ ವಿವಿಧೆಡೆ ಆಗಸ್ಟ್ 15ರವರೆಗೂ ರಾಷ್ಟ್ರಧ್ವಜಾರೋಹಣ ಮಾಡಬೇಕು. ಪ್ರತಿ ಮನೆ ಮನೆಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಹರ್ ಘರ್ ತಿರಂಗ ಆಶಯದ ಬಗ್ಗೆ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದರು.
ಹರ್ ಘರ್ ತಿರಂಗ ಅಭಿಯಾನದÀಂಗವಾಗಿ ಸೈಕಲ್, ಬೈಕ್ ರ್ಯಾಲಿ, ಜಾಥಾದಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳು, ಸಂಸ್ಥೆಗಳು, ಸ್ವ ಸಹಾಯ ಸಂಘಗಳ ನೆರವಿನೊಂದಿಗೆ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಇದರ ದಾಖಲೀಕರಣವು ಆಗಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಎಲ್ಲಾ ಶಾಲಾ ಕಾಲೇಜು, ಕಚೇರಿ, ಬ್ಯಾಂಕು, ಅಂಚೆ ಕಚೇರಿ, ಗ್ರಾಮ ಪಂಚಾಯಿತಿಗಳು ಸೇರಿದಂತೆ ಎಲ್ಲೆಡೆ ಸ್ವಾತಂತ್ರೋತ್ಸವ ದಿನ ಆಚರಣೆಯನ್ನು ಮಾಡಬೇಕು. ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಸಂವಿಧಾನದ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಡಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಧ್ವಜಾರೋಹಣ ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮೀ, ಡಿವೈಎಸ್‍ಪಿ ಲಕ್ಷ್ಮಯ್ಯ, ಅಬಕಾರಿ ಉಪ ಆಯುಕ್ತರಾದ ನಾಗಶಯನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ, ತಹಶೀಲ್ದಾರ್ ಗಿರಿಜಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾಮಚಂದ್ರರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾಜು, ನಗರಸಭೆ ಆಯುಕ್ತಎಸ್.ವಿ. ರಾಮದಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾ ಪೊಲೀಸ್ ಕವಾಯತು (ಪೆರೇಡ್) ಮೈದಾನಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ವೀಕ್ಷಿಸಿದರು.