ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೧೪;ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಲ್ಲಿ 2023-24ನೇ ಸಾಲಿನಲ್ಲಿ ಕೈಗೊಂಡ ರೂ.3.3 ಕೋಟಿ ವೆಚ್ಚದ ತುರ್ತು ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆಗೆ ಘಟನೋತ್ತರ ಅನುಮತಿಯನ್ನು ನೀಡಲಾಯಿತು. ಈ ಕುರಿತು  ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.  ಜಿಲ್ಲೆಯ ಬರ ಪೀಡಿತ ತಾಲ್ಲೂಕುಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಜಿಲ್ಲೆಗೆ ರೂ.1.5 ಕೋಟಿ ಹಾಗೂ ಎರಡನೇ ಹಂತದಲ್ಲಿ ರೂ.3.64 ಕೋಟಿ ಅನುದಾನ ಬಿಡುಗಡೆ ಮಾಡಿತ್ತು.  ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳ ಕೋರಿಕೆ ಮೇರೆಗೆ ಚಳ್ಳಕೆರೆ, ಚಿತ್ರದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಹೊಸದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ತಲಾ ರೂ.60.70 ಲಕ್ಷ ವೆಚ್ಚದ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಪೂರ್ಣಗೊಂಡ ಈ ಕಾಮಗಾರಿಗಳ ಕ್ರಿಯಾ ಯೋಜನೆಗೆ ಘಟನೋತ್ತರವಾಗಿ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಕಳೆದ ಮೇ.29 ರಂದು ಜರುಗಿದ ಸಭೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ರಾಂಪುರ ಹಾಗೂ ಇತರೆ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ರೂ.60.70 ಲಕ್ಷ ವೆಚ್ಚದ ಹೊಸ ಪೈಪ್ ಲೈನ್ ಅಳವಡಿಕೆಗೆ ಕಾಮಗಾರಿಗೆ ಅನುಮತಿ ನೀಡಲಾಗಿತ್ತು.