ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ
ಕೋಲಾರ,ಅ.೧- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ ೪ ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟ ಹಮ್ಮಿಕೊಂಡಿರುವುದಾಗಿ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ವತಿಯಿಂದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ರಾಜ್ಯದ ಶೇಕಡಾ ೬೮ ರಿಂದ ೭೦ ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳಿಂದ ಶೇಕಡಾ ೭೦ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ, ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯಿತಿಯ ಎಲ್ಲಾ ಪಂಚ ನೌಕರಾದ, ಡಿ.ಇ.ಓ ಕರ ವಸೂಲಿಗಾರರು, ಜಲಗಾರರು, ಕಚೇರಿ ಸಹಾಯಕರು, ಸ್ವಚ್ಛತಾ ಗಾರರು ತಮ್ಮ ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ಸೂಕ್ಷ್ಮ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ ಎಂದರು.
ಅದರೆ ಈವರೆಗೆ ಯಾವುದೇ ಮನವಿಗೂ ಸ್ಪಂದಿಸದೆ ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರ ಹಾಗು ಸಿಬ್ಬಂದಿಗಳನ್ನ ನೇರ ಹೊಣೆಗಾರರನ್ನಾಗಿ ಮಾಡುತ್ತಿರುವ, ಸರ್ಕಾರ ಮತ್ತು ಇಲಾಖೆಯ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಅಕ್ಟೋಬರ್ ೪ ರಿಂದ ರಾಜ್ಯಾದ್ಯಂತ, ಗ್ರಾಮ ಪಂಚಾಯತಿಯ ಸೇವೆಗಳಾದ ಬಾಪೂಜಿ ಸೇವೆ ಕೇಂದ್ರದ ಸೇವೆಗಳು, ಗ್ರಾಮ ಕಸ ಸಂಗ್ರಹಣೆ, (ಕುಡಿಯುವ ನೀರು ಸರಬರಾಜು ವಿದ್ಯುತ್ ದೀಪಗಳ ನಿರ್ವಹಣೆಯನ್ನು ಹೊರತುಪಡಿಸಿ) ಕಚೇರಿ ಕರ್ತವ್ಯ ನಿರ್ವಹಿಸುವುದನ್ನ ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟ ಕೈಗೊಳ್ಳುತ್ತಿರುವುದಾಗಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು,
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಲಪತಿ ಮಾತನಾಡಿ ಗ್ರಾಮ ಪಂಚಾಯಿತಿ ಎಂದರೆ ಗ್ರಾಮ ಸರ್ಕಾರ ಇದ್ದ ಹಾಗೆ, ಆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮುಖ್ಯಮಂತ್ರಿ ಇದ್ದ ಹಾಗೆ, ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ಇದ್ದ ಹಾಗೆ, ಆದರೆ ಚುನಾಯಿತ ಪ್ರತಿನಿಧಿಗಳು ನಡೆದುಕೊಳ್ಳುವ ರೀತಿ ಭಿನ್ನವಾಗಿದೆ, ಗ್ರಾಮ ಸರ್ಕಾರ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಹೋರಾಟ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಸಂಪರಾಜು ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ನೌಕರರು ಒಂದು ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲವಿದೆ, ಸರ್ಕಾರ ಆದಷ್ಟು ಶೀಘ್ರದಲ್ಲಿ ನಮ್ಮ ಬೇಡಿಕೆಗಳನ್ನ ಈಡೇರಿಸಬೇಕಿದೆ, ಬೇಡಿಕೆಗಳು ಈಡೇರಿಸಿದರೆ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳ ಕಾರ್ಯ ಮತ್ತಷ್ಟು ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
ನಿಯೋಗದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ರಾಜ್ಯ ಪರಿಷತ್ ಸದಸ್ಯ ಸುರೇಶ್ ಬಾಬು, ಖಜಾಂಚಿ ರಾಮಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್, ತಾಲೂಕು ಅಧ್ಯಕ್ಷ ವಿಟ್ಟಪ್ಪನಹಳ್ಳಿ ನಾರಾಯಣಸ್ವಾಮಿ, ಡಿ.ಎಫ್.ಓ ಜಿಲ್ಲಾಧ್ಯಕ್ಷ ರವಿಕುಮಾರ್, ಹುತ್ತೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಪ್ಪ, ಕೆ.ಎಸ್.ಪಿ.ಡಿ.ಓ.ಡ್ಲ್ಯೂ.ಎ ತಾಲೂಕು ಅಧ್ಯಕ್ಷ್ಯ ಸತೀಶ್ ಕುಮಾರ್ ಹಾಜರಿದ್ದರು.