ಕಾರು-ಬೈಕ್ ನಡುವೆ ಡಿಕ್ಕಿ: ಇಬ್ಬರಿಗೆ ಗಾಯ
ಕಲಬುರಗಿ,ಆ.10-ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಶಹಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲಗತ್ತಿ ಗೇಟ್ ಬಳಿ ಬುಧವಾರ ರಾತ್ರಿ ನಡೆದಿದೆ.
ಶಹಾಬಾದ ನಿವಾಸಿಗಳಾದ ನಾಗಣ್ಣ ತಂದೆ ಶಿವಪ್ಪ ಶಿರವಾಳ (35) ಮತ್ತು ಚಂದ್ರಕಾಂತ ತಂದೆ ದುರ್ಗಪ್ಪ (38) ಎಂಬುವವರು ಗಾಯಗೊಂಡಿದ್ದಾರೆ.
ನಾಗಣ್ಣ ಶಿರವಾಳ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರಕಾಂತ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಸಂಭವಿಸಿದ ನಂತರ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ನಾಗಣ್ಣ ಶಿರವಾಳ ಮತ್ತು ಚಂದ್ರಕಾಂತ ಅವರು ಮಳಖೇಡದಲ್ಲಿ ವೈನ್‍ಶಾಪ್ ಒಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಮಳಖೇಡದಿಂದ ಶಹಾಬಾದಗೆ ಬೈಕ್ ಮೇಲೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದು ಶಹಾಬಾದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಹಾಬಾದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.