ಡಿ.ದೇವರಾಜು ಅರಸುರವರ 109 ನೇ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಿ: ಡಾ. ಕುಮಾರ
ಸಂಜೆವಾಣಿ ವಾರ್ತೆ
ಮಂಡ್ಯ:ಆ.10- ಜಿಲ್ಲಾಡಳಿತದ ವತಿಯಿಂದ ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆಯನ್ನು ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಡಿ.ದೇವರಾಜ ಅರಸುರವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಪೂರ್ಣ ಕುಂಭ ಹೊತ್ತ ಮಹಿಳೆಯರು,ಕಲಾ ತಂಡಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಮೆರವಣಿಗೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುವಂತೆ ವ್ಯವಸ್ಥೆ ಮಾಡಿ ಎಂದರು.
ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು,ತಳಿರು ತೋರಣ ಹಾಗೂ ಅಲಂಕಾರಿಕ ಹೂ ಕುಂಡಗಳಿಂದ ವೇದಿಕೆಯನ್ನು ಅಲಂಕರಿಸಿ.ನುರಿತ ವ್ಯಕ್ತಿಯನ್ನು ಆಯ್ಕೆ ಮಾಡಿ ಉಪನ್ಯಾಸಕ್ಕೆ ವ್ಯವಸ್ಥೆ ಮಾಡಿ ಎಂದರು.
ಬಹುಮಾನ ವಿತರಣೆ:ಎಸ್.ಎಸ್. ಎಲ್.ಸಿ.ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿ. ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾಗಿರುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಎಂದರು.
ಪುಸ್ತಕ ಮಳಿಗೆ: ಡಿ.ದೇವರಾಜ ಅರಸು ಅವರ ಸಾಧನೆಗಳ ಕುರಿತು ಅನೇಕ ಪುಸ್ತಕಗಳಿವೆ. ಅವುಗಳ ಅನಾವರಣ ಹಾಗೂ ಮಾರಟ ಮಳಿಗೆಯನ್ನು ಕಾರ್ಯಕ್ರದ ದಿನ ತೆರೆಯಿರಿ ಎಂದರು.
ಛಾಯಚಿತ್ರ ಪ್ರದರ್ಶನ.ಡಿ. ದೇವರಾಜ್ ಅರಸು ಅವರ ಜೀವನ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಛಾಯಚಿತ್ರ ಪ್ರದರ್ಶನವನ್ನು ಆಯೋಜಿಸಿ ಎಂದರು.ಡಿ.ದೇವರಾಜ ಅರಸುರವರ ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಬಹಳ ವ್ಯವಸ್ಥಿತವಾಗಿ ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್ ಅವರು ಮಾತನಾಡಿ ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ತಡೆಗಟ್ಟಲು ಅನುಸರಿಸಬೇಕಿರುವ ಕ್ರಮಗಳ ಬಗ್ಗೆ ಮೆರವಣಿಗೆಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ,ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಸಿದ್ದಲಿಂಗೇಶ್, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಉಪಸ್ಥಿತರಿದ್ದರು.