ದಾವಣಗೆರೆ 3  ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು, ಸುಗಮ ಪರೀಕ್ಷೆಗೆ ಸೂಚನೆ
ಸಂಜೆವಾಣಿ ವಾರ್ತೆ
ದಾವಣಗೆರೆ ಆ.10; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ  ಸಹಾಯಕ ಇಂಜಿನಿಯರ್‍ಗಳ ಸಿವಿಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 11 ರಂದು ದಾವಣಗೆರೆ ನಗರದ 3 ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಇಎ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿದ್ದು ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ನಡೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈಗಾಗಲೇ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಯನ್ನು ಯಾವ ರೀತಿ ನಡೆಸಬೇಕೆಂದು ನಿಯಮಗಳನ್ನು ರೂಪಿಸಿದ್ದು, ಅದರಂತೆ ಪರೀಕ್ಷಾ ಮೇಲ್ವಿಚಾರಕರು ಹಾಗೂ ಕೇಂದ್ರದ ಅಧೀಕ್ಷಕರು ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ.