ಗವರ್ನರ್ ಗೋ ಬ್ಯಾಕ್ ಚಳವಳಿ
ಸಂಜೆವಾಣಿ ನ್ಯೂಸ್
ಮೈಸೂರು: ಆ.09:- ಮುಡಾ ಹಗರಣ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದ್ದು, ಕೂಡಲೇ ವಾಪಸ್ ಪಡೆಯದೇ ಇದ್ದಲ್ಲಿ ಗವರ್ನರ್ ಗೋ ಬ್ಯಾಕ್ ಚಳವಳಿ ಆರಂಭಿಸಲಾಗುವುದು ಎಂದು ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಹೀಗಾಗಿ ಹಗರಣ ಸಂಬಂಧ ಪ್ರಾಸಿಕ್ಯೂಷನ್ ನಡೆಸಲು ದೂರು ನೀಡಿದ ತಕ್ಷಣವೇ ಯಾವುದೇ ಪರಿಶೀಲನೆ ನಡೆಸದೆ ನೋಟಿಸ್ ಜಾರಿ ಮಾಡಿರುವುದು ಸರಿಯಲ್ಲ ಎಂದು ಕಿಡಿ ಕಾರಿದರು.
ದೇಶದಲ್ಲಿ ಮೋದಿ ವಿರುದ್ದ ಮಾತನಾಡುವ ಶಕ್ತಿ ಇರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಹುನ್ನಾರ ನಡೆಸುತ್ತಿದ್ದು, ಅದು ನಡೆಯುವುದಿಲ್ಲ ಎಂದು ಹೇಳಿದರು.
ಜನಾಂದೋಲನ ಸಮಾವೇಶಕ್ಕೆ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದು, ಪಕ್ಷದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ವೇದಿಕೆಗೆ ಆಗಮಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮ್ಮದ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಇದ್ದರು.