ಮುಡಾ ಹಗರಣ ಸಿಬಿಐಗೆ ವಹಿಸಲಿ: ಸಿಎಂ ಸಿದ್ದು
ಸಂಜೆವಾಣಿ ನ್ಯೂಸ್
ಮೈಸೂರು: ಆ.09:- ಸಿಎಂ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲಿ. ಇಲ್ಲದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಎಂಎಲ್‍ಸಿ ಎನ್.ರವಿಕುಮಾರ್ ಒತ್ತಾಯಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ ಅಕ್ರಮವಾಗಿ 14 ಸೈಟ್ ಪಡೆದಿರುವುದರ ವಿರುದ್ದ ಹೋರಾಟ ನಡೆಸಲಾಗುತ್ತಿದ್ದು, ಬೆಂಗಳೂರಿನಿಂದ ಮೈಸೂರಿಗೆ ಕಳೆದ ಶನಿವಾರ ಹಮ್ಮಿಕೊಂಡಿದ್ದ ಪಾದಯಾತ್ರೆ ಆ.10ರಂದು ಅಂತ್ಯಗೊಳ್ಳಲಿದೆ. ಇದರ ಅಂಗವಾಗಿ ಮೈಸೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದರು.
ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಸಿದ್ದರಾಮಯ್ಯ ಸೈಟ್ ಪಡೆದಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದೇವೆ. ರಾಜ್ಯ ಸರ್ಕಾರ ಸೂಚಿಸುವ ತನಿಖೆಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹಾಗಾಗಿ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಆಗ್ರಹಿಸಿದರೂ ಒಪ್ಪುತ್ತಿಲ್ಲ. ವಿಧಾನಮಂಡಲದ ಅಧಿವೇಶನದಲ್ಲೂ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದು ದೂರಿದರು.
ಮುಡಾ ಜತೆಗೆ ವಾಲ್ಮೀಕಿ ನಿಗಮದಲ್ಲೂ ಅಕ್ರಮ ನಡೆದಿದೆ. ಇದನ್ನು ಸ್ವತಃ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿರುವ ಸಿದ್ದರಾಮಯ್ಯ ಏನು ತಪ್ಪು ಮಾಡಿಲ್ಲ ಎಂದು ಹೇಳಿಕೊಂಡು ನಾಳೆ ಜನಾಂದೋಲನ ಸಮಾವೇಶ ಮಾಡಲು ಮುಂದಾಗಿದ್ದಾರೆ. ಮಜಾವಾದಿ ಸಿದ್ದರಾಮಯ್ಯ ಎರಡು ಪ್ರಕರಣಗಳನ್ನು ಸಿಬಿಐಗೆ ವಹಿಸಲು ಒಪ್ಪುತ್ತಿಲ್ಲ. ಈ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಪಾದಯಾತ್ರೆ ನಡೆಸುತ್ತಿದ್ದೇವೆ ಎಂದರು.
10ರಂದು ಸಮಾವೇಶ:
ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಅಂತಿಮ ಹಂತದಲ್ಲಿದೆ. ಪಾದಯಾತ್ರೆಗೆ ಜೆಡಿಎಸ್ ಕೂಡ ಸಾಥ್ ನೀಡಿದೆ. ಆ.10ರಂದು ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದೂವರೆ ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಮಂಡ್ಯ ಸೇರಿದಂರೆ ರಾಜ್ಯದ ವಿವಿಧ ಭಾಗಗಳಿಂದ ಜನರು ಬರಲಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಎಸ್ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಸಮಾಜವಾದಿ ಎಂದು ಹೇಳಿಕೊಳ್ಳುವ ಮಜಾವಾದಿ ಸಿದ್ದರಾಮಯ್ಯ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ. 2013ರ ಚುನಾವಣೆಯಲ್ಲಿ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‍ನಲ್ಲಿ ಈ ನಿವೇಶನಗಳ ಮಾಹಿತಿಯನ್ನೇ ನೀಡಿಲ್ಲ. 2018ರ ಚುನಾವಣೆಯಲ್ಲಿ ಮಾಹಿತಿ ನೀಡಿದ್ದಾರೆ. ಇದೇನಾ ನಿಮ್ಮ ಸಮಾಜವಾದ? ಇದೆಲ್ಲವನ್ನು ಜನರಿಗೆ ಪಾದಯಾತ್ರೆಯಲ್ಲಿ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಭಾಗವಹಿಸಿದ್ದರು