ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ಸಭೆ
ಗದಗ,ಆ7: ಸಕಾಲ ಯೋಜನೆಯ ಅನುಷ್ಟಾನದಲ್ಲಿ ಜಿಲ್ಲೆಯು ಇನ್ನೂ ಉತ್ತಮ ಪ್ರಗತಿ ಸಾಧಿಸಲು ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಸಮಯದಲ್ಲಿಯೇ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಸಕಾಲ ಯೋಜನೆ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕು. ಈ ಕುರಿತು ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ಮಾಡಿದರು.
ಪ್ರತಿದಿನ ಅಧಿಕಾರಿಗಳು ಕಚೇರಿಯಲ್ಲಿ ಸಕಾಲ ನಿರ್ವಹಿಸುವ ಕೆಲಸಗಾರರೊಂದಿಗೆ ಚರ್ಚಿಸುವ ಮೂಲಕ ಸಕಾಲ ಅರ್ಜಿಗಳ ವಿಲೇವಾರಿಗೆ ಆದ್ಯತೆ ವಹಿಸಬೇಕು. ಜಿಲ್ಲೆಯು ಸಕಾಲ ಯೋಜನೆಯಡಿ ಉತ್ತಮ ಪ್ರಗತಿಯ ಹಂತದಲಿರುವಂತೆ ನೋಡಿಕೊಳ್ಳುವುದು ಪ್ರತಿ ಅಧಿಕಾರಿ ನೌಕರರ ಜವಾಬ್ದಾರಿ ಎಂದರಿತು ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.
ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ವಿನಾಕಾರಣ ತಿರಸ್ಕಾರ ಮಾಡಬಾರದು ಹಾಗೂ ಸ್ವೀಕರಿಸಿದ ಅರ್ಜಿಗಳಿಗೆ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಸಮರ್ಪಕ ಕೆಲಸ ನಿರ್ವಹಣೆಯಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಕಾಲ ಯೋಜನೆಯ ಯಶಸ್ವಿಗಾಗಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.