ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗೆ ಒತ್ತಾಯ
ಆಳಂದ:ಆ.6: ಪ್ರಾಥಮಿಕ ಶಾಲಾ ಅರ್ಹ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತಾ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಹಾಗೂ ಮುಖ್ಯ ಶಿಕ್ಷಕರು ಹಾಗೂ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಸೇವಾ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವೂ ಇಂದಿಲ್ಲಿ ಸರ್ಕಾರವನ್ನು ಆಗ್ರಹಿಸಿದೆ.
ಈ ಕುರಿತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪಾ ಬಿರಾದಾರ ನೇತೃತ್ವದಲ್ಲಿ ಸೋಮವಾರ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಸೇರಿ ಪಟ್ಟಣದ ತಾಲೂಕು ಆಡಳಿತ ಸೌಧನಲ್ಲಿ ತಹಸೀಲ್ದಾರ ಅಣ್ಣಾರಾವ್ ಪಾಟೀಲ ಮೂಲಕ ಸರ್ಕಾರಕ್ಕೆ ಬೇಡಿಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.
2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನುಯ ಗೊಳಿಸಬಾರದು, ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂಬುವ ಇನ್ನಿತರ ಬೇಡಿಕೆಯ ಮನವಿಯನ್ನು ತಹಸೀಲ್ದಾರ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.
ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ಕಾರ್ಯದರ್ಶಿ ಮನಸೂರ ಮುಜಾವರ, ಶ್ರೀಶೈಲ ಮಾಡಿಯಾಳ, ದತ್ತಾ ಪೂಜಾರಿ, ಅಂಬಾರಾಯ ಕಾಂಬಳೆ ಮತ್ತಿತರರು ಇದ್ದರು.