ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರ ಸಂಪನ್ನ
ಸಂಜೆವಾಣಿ ನ್ಯೂಸ್
ಮೈಸೂರು:ಆ.03:- ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು.
ತಾಯಿಯ ದರ್ಶನದ ಹಂಬಲದಿಂದ ಮಂಜು, ಮಳೆಯನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು. ದೇವಸ್ಥಾನದ ಹೊರಗೆ ಹಿಮ ಮಳೆ ಸುರಿಯುತ್ತಿದ್ದರೆ, ದೇವಸ್ಥಾನದ ಒಳಗೆ, ಸರತಿ ಸಾಲಿನಲ್ಲಿ ಜಯಘೋಷಗಳು ಮೊಳಗುತ್ತಿದ್ದವು. ಯಾವುದೇ ಗಲಾಟೆ ಗೊಂದಲಗಳಿಗೆ ಆಸ್ಪದ ಕೊಡದೆ ಸಾವಧಾನವಾಗಿ ದೇವಸ್ಥಾನಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ, ಶಾಸಕರಾದ ಶಾಸಕ ಕೆ.ಹರೀಶ್‍ಗೌಡ, ಜಿ.ಡಿ.ಹರೀಶ್‍ಗೌಡ ಕುಟುಂಬ, ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಮುಂಜಾನೆಯಿಂದಲೇ ಪೂಜೆ:
ಕಡೆಯ ಆಷಾಢ ಶುಕ್ರವಾರವಾದ್ದರಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ಆರಂಭವಾದವು. ದೇವಿಗೆ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ಮತ್ತೊಮ್ಮೆ ಮಹಾಮಂಗಳಾರತಿ ನೆರವೇರಿಸಲಾಯಿತು. ರಾತ್ರಿ 10ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಸಿಂಹವಾಹಿನಿ ಅಲಂಕಾರ:
ಕಳೆದ ಮೂರು ವಾರಗಳಂತೆ ದೇವಸ್ಥಾನ ವಿಶೇಷ ರೀತಿಯಲ್ಲಿ ಅಲಂಕೃತಗೊಂಡಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ವಿವಿಧ ಬಣ್ಣಗಳ ಸೇವಂತಿಗೆ, ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಅಲಂಕೃತಗೊಂಡಿತ್ತು. ದೇವಾಲಯದ ಪ್ರವೇಶದ್ವಾರ, ಹೊರಾವರಣವೂ ವಿಶೇಷವಾಗಿ ಸಿಂಗಾರಗೊಂಡಿತ್ತು. ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯ ದರ್ಶನ ಪಡೆದು ಹೊರಬರುತ್ತಿದ್ದ ಭಕ್ತರಲ್ಲಿ ದನ್ಯತಾಭಾವ ಮೂಡಿತ್ತು.
ಹರಕೆ ತೀರಿಸಿದರು: ಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತರ ದಂಡು ಹರಿದುಬಂದಿತ್ತು. ಕೆಲವರು ಸಾರಿಗೆ ಬಸ್‍ನಲ್ಲಿ ಬಂದರೆ ಇನ್ನು ಕೆಲವರು ಮೆಟ್ಟಿಲುಗಳು ಮೂಲಕ ಬೆಟ್ಟಕ್ಕೆ ಆಗಮಿಸಿದರು. ಚಾಮುಂಡಿಬೆಟ್ಟದ ಪಾದದಿಂದ ಪ್ರತಿ ಮೆಟ್ಟಿಲಿಗೂ ಅರಿಶಿಣ ಕುಂಕುಮ ಹೂಗಳನ್ನಿಟ್ಟು, ಕರ್ಪೂರ ಹಚ್ಚಿ ಭಕ್ತಿ ಭಾವದಿಂದ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದರು. ಕಳೆದ ವಾರಗಳಂತೆಯೇ ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 7ರಿಂದ ಪ್ರಾರಂಭವಾದ ಪ್ರಸಾದ ವಿತರಣೆ ರಾತ್ರಿಯವರೆಗೂ ನಡೆಯಿತು.
ನಗರದ ಹಲವೆಡೆ ಪ್ರಸಾದ ವಿತರಣೆ:
ಕಡೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರವಿರಿಸಿ, ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, ಒಂಟಿಕೊಪ್ಪಲು. ಕುವೆಂಪುನಗರ, ರಾಮಕೃಷ್ಣನಗರ, ವಿಜಯನಗರ ಸೇರಿದಂತೆ ನಗರದೆಲ್ಲೆಡೆÀ ಹಲವೆಡೆ ಪ್ರಸಾದ ವಿತರಣೆ ಮಾಡಲಾಯಿತು. ಸಾರ್ವಜನಿಕರು ಸರತಿ ಸಾಲಿನಲ್ಲಿ ಪ್ರಸಾದ ಸ್ವೀಕರಿಸಿದರು.