ನೂತನ ಸರ್ಕಾರಿ ಪ್ರೌಢಶಾಲೆಯಲ್ಲಿ ಯುವ ಸಂಸತ್ ರಚನೆ
ಕೋಲಾರ,ಆ,೩- ನಗರದ ನೂತನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸಿದ್ದು, ಚುನಾವಣಾ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಶಾಲೆಯ ಉಪ ಪ್ರಾಂಶುಪಾಲೆ ಕೆ.ಉಮಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮತನಾಡಿದ ಅವರು, ಮಕ್ಕಳು ಶಾಲೆಯ ಒಳಿತಿಗಾಗಿ ಹೇಗೆ ಕೆಲಸ ಮಾಡಬೇಕು ಎಂಬುದನ್ನು ತಿಳಿಸಿ, ಶಾಲಾ ಸಂಸತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಯಲು ಸಹಕಾರಿ ಎಂದು ಬಣ್ಣಿಸಿದರು.
೧೮ ವರ್ಷ ತುಂಬಿದ ನಂತರ ನೀವು ಕೂಡ ಈ ದೇಶದ ಮತದಾರರಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ದೇಶದ ಭವಿಷ್ಯವನ್ನು ಬೆಳಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಇಂತಹ ಚುನಾವಣೆಗಳಿಂದ ಮಕ್ಕಳಲ್ಲಿ ನಾಯಕತ್ವದ ಗುಣ, ಸಹಕಾರ ಮನೋಭಾವ ಹಾಗೂ ಒಗ್ಗಟ್ಟು ಮೂಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ.ನಾರಾಯಣ ರೆಡ್ಡಿ, ಮಕ್ಕಳಲ್ಲಿ ಪ್ರಜಾಪ್ರಭುತ್ವದ ಕಲ್ಪನೆ ಹಾಗೂ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ಸಂಸತ್ತಿನ ರಚನೆ ಮಾಡಲಾಗಿದ್ದು ಭಾರತದಂತಹ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಜೆಯ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ತಿಳುವಳಿಕೆ ಇರಬೇಕಾಗಿರುವುದು ಅತ್ಯಗತ್ಯ ಎಂದು ತಿಳಿಸಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಮಕ್ಕಳು ಈ ದೇಶದ ಸಂವಿಧಾನದ ಆಶಯಗಳನ್ನು ಈಡೇರಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು .
ಚುನಾವಣಾ ಕಾರ್ಯಗಳನ್ನು ಸಮಾಜ ವಿಜ್ಞಾನ ಶಿಕ್ಷಕರಾದ ನಿರೂಪಮ, ಚಿತ್ರ, ಹಾಗೂ ಲಲಿತ ಕುಮಾರಿ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಅನುಸೂಯ, ಭಾರತಿ, ಉಮೇರ ಫಾತಿಮಾ, ವನಜಾಕ್ಷಿ, ಜ್ಞಾನ ಸಂಗೀತ, ಝರೀನಾ ಅಂಜು, ವಾಣಿ ಭಾಗವಹಿಸಿದ್ದರು. ಕಾಳಿದಾಸ ಕಾರ್ಯಕ್ರಮ ನಿರೂಪಿಸಿದರು.