ಮದ್ಯವ್ಯಸನದ ಬಗ್ಗೆ ಜನಜಾಗೃತಿ ಅಗತ್ಯ
ಮಧುಗಿರಿ, ಆ. ೩- ಮದ್ಯವ್ಯಸನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅವರನ್ನು ಮನಃಪರಿವರ್ತಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಆ. ೧ ರಂದು ಮದ್ಯ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಕರ್ನಾಟಕವನ್ನು ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡಲು ಹಾಗೂ ಸಾರ್ವಜನಿಕರು ಮತ್ತು ಯುವಜನತೆಯಲ್ಲಿ ವ್ಯಸನದಿಂದ ಮುಕ್ತ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ವಿದ್ಯಾರ್ಥಿಗಳು ಮತ್ತು ಯುವಜನತೆ ಮದ್ಯ ವ್ಯಸನದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ. ಇದರಿಂದ ಕರ್ನಾಟಕವನ್ನು ಮದ್ಯ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡಲು ಸಾಧ್ಯವಾಗುತ್ತದೆ ಎಂದರು.
ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಧರಣೇಶ್ ಗೌಡ ಮಾತನಾಡಿ, ಮದ್ಯ ವ್ಯಸನದಿಂದ ಹೆಚ್ಚು ಮಂದಿ ಲೈಂಗಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಮಾನಸಿಕ ಆರೋಗ್ಯ ಮತ್ತು ಕಾಯಿಲೆಗಳು ಹೆಚ್ಚಾಗುತ್ತಿವೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೆ ಮದ್ಯ ವಸನದಿಂದ ಎಚ್‌ಐವಿ ಕ್ಷಯ ಕ್ಯಾನ್ಸರ್ ಹೃದಯಾಘಾತ ಹೆಚ್ಚಾಗುತ್ತದೆ. ಸಮಾಜಘಾತಕ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. ಇದರಿಂದ ಮತ್ತಷ್ಟು ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರೇಡ್-೨ ತಹಶೀಲ್ದಾರ್ ನಂದಿನಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಬಾಳಪ್ಪ, ಬಿಆರ್‌ಸಿ ಹನುಮಂತರಾಯಪ್ಪ, ಪುರಸಭೆ ಆರೋಗ್ಯ ನಿರೀಕ್ಷಕ ಬಾಲಾಜಿ, ಎಸಿಡಿಪಿಓ ನಾಗಭೂಷಣ್, ಆರೋಗ್ಯ ನಿರೀಕ್ಷಣಾಧಿಕಾರಿ ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.