ಎಸ್ಸೆಸ್ಸೆಲ್ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಸಂಜೆವಾಣಿ ವಾರ್ತೆ
ಹೊಸಪೇಟೆ ಆ2: ಎಸ್ಸೆಸ್ಸೆಲ್ಸಿ ಪರೀಕ್ಷೆ-3ನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.
ಇಂದಿನಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರೌಢಶಾಲಾ ಮುಖ್ಯ ಗುರುಗಳು ಮತ್ತು ಶಿಕ್ಷಕರು ಎಸ್ಸೆಸೆಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿμÉೀಧಾಜ್ಞೆ ಜಾರಿಗೊಳಿಸಲಾಗಿದೆ. ಕೊಠಡಿ ಮೇಲ್ವಿಚಾರಕರು, ಪ್ರೌಢಶಾಲಾ ಶಿಕ್ಷಕರು, ವೀಕ್ಷಕರು ಹಾಗೂ ಇತರೆ ಪರೀಕ್ಷಾ ನಿಯೋಜಿತ ಸಿಬ್ಬಂದಿ ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.  ಕಾಲಮಿತಿಯಲ್ಲಿ ನಿಯಮಾನುಸಾರ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡು ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು. ಈಗಾಗಲೇ ನೀಡಿರುವ ನಾಮಿನಲ್ ರೋಲ್‍ನಲ್ಲಿ ಇರುವಂತೆ ಪರೀಕ್ಷಾ ಕೇಂದ್ರದಲ್ಲಿ ಆಸನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಉಪ ನಿರ್ದೇಶಕರ ಕಾರ್ಯಾಲಯದಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆಯ ನೇರ ಪ್ರಸಾರ ಇರುವುದರಿಂದ ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಮುಂಚಿತವಾಗಿ ಹಾಗೂ ಕಡ್ಡಾಯವಾಗಿ ಎಲ್ಲ ಮುಖ್ಯಾಧಿಕಾರಿಗಳು ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲಾ ಅಗತ್ಯ ತಯಾರಿ ನಡೆಸಿದ ಬಗ್ಗೆ ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಎಚ್ಚರಿಕೆಯಿಂದ ತಪಾಸಣೆಗೆ ಕ್ರಮಕೈಗೊಂಡು ಅಭ್ಯರ್ಥಿಗಳಿಗೆ ಸೂಕ್ತ ತಿಳಿವಳಿಕೆ ನೀಡಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರು, ಶೌಚಾಲಯ, ಸೂಕ್ತ ಗಾಳಿ, ಬೆಳಕು, ಆಸನದ ವ್ಯವಸ್ಥೆ ಮಾಡಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಪೆÇಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎ. ಹನುಮಕ್ಕ ಮಾತನಾಡಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ನಡೆಸುತ್ತಿರುವ 2024ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 3165 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆಗಸ್ಟ್ 02 ರಿಂದ ಆಗಸ್ಟ್ 09ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.