ಶಿಥಿಲವಾದ ಅಂಗನವಾಡಿ, ಶಾಲಾ ಕಟ್ಟಡಗಳ ದುರಸ್ಥಿ ತಿಂಗಳಲ್ಲಿ ಪೂರ್ಣಗೊಳಿಸಲು  ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.೨; ಜಲಜೀವನ್ ಮಿಷನ್ ಯೋಜನೆಯಡಿ ಮುಕ್ತಾಯವಾಗಿರುವ ಕಾಮಗಾರಿಗಳಿಂದ ನೀರು ಸರಬರಾಜು ಮಾಡಲು ಮತ್ತು ಶಿಥಿಲಗೊಂಡಿರುವ ಅಂಗನವಾಡಿ ಹಾಗೂ ಶಾಲಾ ಕಟ್ಟಡ, ಶೌಚಾಲಯಗಳ ಕಾಮಗಾರಿಗಳನ್ನು ತಿಂಗಳಲ್ಲಿ ಪೂರ್ಣಗೊಳಿಸಿ ಜನರ ಬಳಕೆಗೆ ಮುಕ್ತವಾಗಿಸಬೇಕೆಂದು  ಮಾಯಕೊಂಡ ಶಾಸಕರಾದ ಕೆ. ಎಸ್.ಬಸವಂತಪ್ಪ ಅಧಿಕಾರಿಗಳಿಗೆ ತಿಳಿಸಿದರು.ಅವರು  ಜಿಲ್ಲಾ ಪಂಚಾಯತ್‌ನ ಎಸ್.ಎಸ್ ಮಲ್ಲಿಕಾರ್ಜುನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಇಲಾಖೆಗಳಿಂದ ಕೈಗೊಳ್ಳಲಾಗಿರುವ ಕ್ಷೇತ್ರದ ಅಭಿವೃದ್ದಿ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.  ಕ್ಷೇತ್ರದಲ್ಲಿ ವಿವಿಧ ಇಲಾಖೆಗಳಿಂದ ಅನುಷ್ಠಾನ ಮಾಡುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಬಾಕಿ ಉಳಿಸಿ ಕೊಳ್ಳಲಾಗಿದೆ, ಕುಡಿಯುವ ನೀರು, ಚರಂಡಿ, ಶಾಲಾ ಕಟ್ಟಡ, ರಸ್ತೆ, ಅಂಗನವಾಡಿ ಸೇರಿದಂತೆ ಗ್ರಾಮಗಳಿಗೆ ಅಗತ್ಯವಿರುವ ಕಾಮಗಾರಿಗಳಿದ್ದು ಈ ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಎಂದರು.