ಪ್ರವಾಹ ಎದುರಿಸಲು ಸಮಾರೋಪಾದಿಯಲ್ಲಿ ಸನ್ನದ್ಧವಾಗುವಂತೆ ಜಿಲ್ಲಾಡಳಿತಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೂಚನೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.೧: ವರುಣನ ಕೃಪೆಯಿಂದ ಈ ಬಾರಿ ಉತ್ತಮ ಮಳೆಯಾಗಿದ್ದು, ತುಂಗಾ ಜಲಾಶಯ ಹಾಗೂ ಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಹ ತಲೆದೋರುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸೂಚಿಸಿದ್ದಾರೆ. ನವದೆಹಲಿಯಲ್ಲಿ ಲೋಕಸಭೆ ಅಧಿವೇಶನದಲ್ಲಿ ಪಾಲ್ಗೊಂಡಿದ್ದು, ದಾವಣಗೆರೆಗೆ ಬಂದ ಬಳಿಕ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಾಗುವುದು. ನದಿ ಪಾತ್ರದ ಜನರನ್ನು ಸ್ಥಳಾಂತರಿಸುವ ಕೆಲಸ ಮಾಡಬೇಕು. ಜೊತೆಗೆ ಗಂಜಿ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ಕೊಟ್ಟಿದ್ದಾರೆ. ತುಂಗಾಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಹರಿಹರ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ನದಿ ಪಾತ್ರದಲ್ಲಿ ಪ್ರವಾಹ ಹೆಚ್ಚಾಗಿದೆ. ತುಂಗಾ ಜಲಾಶಯದಿಂದಲೂ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಅದೇ ರೀತಿಯಲ್ಲಿ ಭದ್ರಾ ಡ್ಯಾಂಗೆ ಭಾರೀ ನೀರು ಬಂದಿದ್ದು, ಹೊರ ಹರಿವು ಸಹ ಹೆಚ್ಚಾಗಿದೆ. ಸುಮಾರು 40 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರನ್ನು ಕ್ರಸ್ಟ್ ಗೇಟ್ ಗಳ ಮೂಲಕ ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರಿಗೆ ಸೂಚನೆ ನೀಡಿದ್ದಾರೆ. ಪ್ರವಾಹ ಬಂದಾಗಲೆಲ್ಲಾ ಸಮಸ್ಯೆಗಳು ಅನಾವರಣಗೊಳ್ಳುತ್ತವೆ. ಗದ್ದೆಗಳಿಗೆ ನೀರು ನುಗ್ಗುತ್ತದೆ. ಅದೇ ರೀತಿಯಲ್ಲಿ ನದಿ ಪಾತ್ರದಲ್ಲಿನ ಮನೆಗಳಿಗೆ ನೀರು ನುಗ್ಗುತ್ತೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಸಂತ್ರಸ್ತರಿಗೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳಿ. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಆಗಬಾರದು ಎಂದು ಪ್ರಭಾ ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ. ಜನರು ಸಮಸ್ಯೆ ಎಂದು ಹೇಳಿಕೊಂಡು ಬರುವಂತೆ ಮಾಡದಂತೆ ಅಧಿಕಾರಿಗಳು ಕ್ರಮ ಜರುಗಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಿಂದ ಯಾರೇ ಕರೆ ಮಾಡಿದರೂ ಕರೆ ಸ್ವೀಕರಿಸಬೇಕು. ಕಷ್ಟಗಳಿಗೆ ಸ್ಪಂದಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜನರೊಟ್ಟಿಗೆ ಅಧಿಕಾರಿಗಳು ಇರಬೇಕು. ಇಂಥ ಸಮಯದಲ್ಲಿ ಸಂತ್ರಸ್ತರು ಸುರಕ್ಷಿತ ಸ್ಥಳದಲ್ಲಿ ಇರಬೇಕು ಎಂದು ಸಂಸದರು ತಿಳಿಸಿದ್ದಾರೆ. ಈ ಬಾರಿ ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಕಾರಣ ಜುಲೈ ಅಂತ್ಯದೊಳಗೆ ಭದ್ರಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದ ನೀರಿನ ಮಟ್ಟ 184.6 ಅಡಿ ಆಗಿದೆ. 61 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಧಾರಾಕಾರವಾಗಿ ಬರುತ್ತಿದೆ. ಇದೇ ರೀತಿ ಮಳೆ ಮುಂದುವರಿದರೆ ಜಲಾಶಯದಿಂದ ಹೊರ ಬಿಡುವ ನೀರಿನ ಪ್ರಮಾಣವೂ ಹೆಚ್ಚಾಗಲಿದೆ. ಆದ ಕಾರಣ ಅಧಿಕಾರಿಗಳು ಈಗಿನಿಂದಲೇ ಸನ್ನದ್ಧರಾಗುವಂತೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.