ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆಗೆ ಸೂಚನೆ
ಬೆಳಗಾವಿ, ಜು.೩೧: ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಕಾಳಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ ನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಆಹಾರ ಸಾಮಗ್ರಿ, ಔಷಧ ಮತ್ತು ನೀರು ಮತ್ತಿತರ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಜಾನುವಾರು ಶಿಬಿರಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು.
೨೦೧೯ರಲ್ಲಿ ಉದ್ಭವಿಸಿದ್ದ ಸಮಸ್ಯೆಗಳನ್ನು ತಿಳಿದುಕೊಂಡು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಕಾಳಜಿ ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು. ಈಗಾಗಲೇ ಸಿದ್ಧತೆ ಮಾಡಿಕೊಂಡಿರುವುದರಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು.