ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕೋಲಾರ,ಜು.೨೯- ಇತ್ತೀಚೆಗೆ ಕೇಂದ್ರ ಸರ್ಕಾರವು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಮತ್ತು ಕೇಂದ್ರ ಸರ್ಕಾರವು ರಾಜ್ಯದ ಬಗ್ಗೆ ಹೊಂದಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣ್ ನೇತೃತ್ವದಲ್ಲಿ ನಗರದ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀಜಿ ಆವರಣದ ಪ್ರತಿಮೆ ಮುಂಭಾಗದ ವೇದಿಕೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಲಕ್ಷ್ಮೀನಾರಾಯಣ್ ಮಾತನಾಡಿ, ಕೇಂದ್ರ ಸರ್ಕಾರವು ಬಜೆಟ್ ಮಂಡಿಸಿದಾಗ ರಾಜ್ಯ ಸರ್ಕಾರವನ್ನು ನಿರ್ಲಕ್ಷ್ಯ ಮಾಡಿದ್ದು, ತಮ್ಮ ಅಧಿಕಾರ ಉಳಿಸಿಕೊಳ್ಳಲು ಮಿತ್ರ ಪಕ್ಷಗಳನ್ನು ಮೆಚ್ಚಿಸಲು ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಅನುದಾನ ನೀಡಿದೆ ಎಂದು ದೂರಿದರು.
ಕರ್ನಾಟಕಕ್ಕೆ ಯಾವುದೇ ರೀತಿಯ ವಿಶೇಷ ಅನುದಾನ ಹಾಗೂ ಕಾಮಗಾರಿಗಳನ್ನು ನೀಡದೆ ವಂಚಿಸಿದೆ ಹಾಗೂ ಅನ್ಯಾಯ ಮಾಡಿ ಮಲತಾಯಿ ಧೋರಣೆಯನ್ನು ಎತ್ತಿ ತೋರಿಸಿದೆ ಎಂದು ಟೀಕಿಸಿದರು.
ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿಯಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕೂಡ ಅಧ್ಯಕ್ಷ ಮಹಮದ್ ಹನೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಜಿಲ್ಲಾ ಎಸ್ಸಿ ವಿಭಾಗದ ಅಧ್ಯಕ್ಷ ಕೆ.ಜಯದೇವ್, ಎಸ್.ಟಿ.ವಿಭಾಗದ ಜಿಲ್ಲಾಧ್ಯಕ್ಷ ಎಸ್.ಎಂ.ನಾಗರಾಜ್, ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಸ್.ಮಂಜುನಾಥ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಮುಖಂಡರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.