ಸೆ.೧೪ ರಾಷ್ಟ್ರೀಯ ಜನತಾ ನ್ಯಾಯಾಲಯ
ಕೋಲಾರ,ಜು,೨೮-ನ್ಯಾಯಾಲಯ ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜಿಮಾಡಿಕೊಳ್ಳುವ ಕುರಿತು ತಿಳಿಸುವ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಇವರ ನಿರ್ದೇನದಂತೆ ಕೋಲಾರ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲು ಮತ್ತು ಕೆ.ಜಿ.ಎಫ್ ತಾಲ್ಲೂಕು ನ್ಯಾಯಾಲಯಗಳಲ್ಲಿ ದಿನಾಂಕ:೧೪-೦೯-೨೦೨೪ ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಅವಕಾಶವಿರುತ್ತದೆ.
ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಗಾರರು ಹಾಗೂ ಅವರ ವಕೀಲರು ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ಸಂಧಾನ ಮೂಲಕ ಬಗೆಹರಿಸಿಕೊಳ್ಳುವ ಅವಕಾಶವಿರುತ್ತದೆ. ಈ ಪದ್ಮಾಯ ನ್ಯಾಯ ವಿತರಣೆ ಜನಮನ್ನಣೆ ಪಡೆದುಕೊಂಡಿದ್ದು, ಅದರಲ್ಲಿ ಉಭಯ ಪಕ್ಷಗಾರರು ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಮುಕ್ತ ಅವಕಾಶವಿರುತ್ತದೆ. ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಚಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಿವಿಲ್ ಪ್ರಕರಣಗಳು, ರಾಜಿಯಾಗುವ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕೇಮುಗಳು, ವೈವಾಹಿಕ-ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನೆಯನ್ನು ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳು ಮತ್ತು ಜೀವನಾಂಶ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವ ಅವಕಾಶವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ರಾಷ್ಟ್ರೀಯ ಜನತಾ ನ್ಯಾಯಾಲಯದ ಪ್ರಯೋಜನಗಳು: ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.
ಈ ಹಿಂದೆ ದಿನಾಂಕ:೧೩-೦೭-೨೦೨೪ ರಂದು ನಡೆದ ಜನತಾ ನ್ಯಾಯಾಲಯದಲ್ಲಿ ಒಟ್ಟು ೧೦೮೯೧ ಕೋಲಾರ ಜಿಲ್ಲೆಯ ನ್ಯಾಯಾಲಯಗಳಲ್ಲಿದ್ದ ಚಾಲ್ತಿ ಪ್ರಕರಣಗಳು ಹಾಗೂ ೩೪೪೪೨ ವ್ಯಾಜ್ಯ ಪೂರ್ವ ಬ್ಯಾಂಕ್ ಪ್ರಕರಣಗಳು ಸೇರಿ ಒಟ್ಟು ೪೫೩೩೩ ಪ್ರಕರಣಗಳು ರಾಜಿ ಮೂಲಕ ಮುಕ್ತಾಯಗೊಂಡಿರುತ್ತವೆ. ಸದರಿ ಜನತಾ ನ್ಯಾಯಾಲಯದಲ್ಲಿ ಒಟ್ಟು ರೂ.೫೨,೦೦,೫೨,೧೨೪-೦೦ ಪರಿಹಾರದ ಹಣ ರಾಜಿ ಮೂಲಕ ಪಾವತಿಯಾಗಿರುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ ಮಂಜುನಾಥರವರು ಈ ರಾಷ್ಟ್ರೀಯ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿರುತ್ತಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್ ಹೊಸಮನಿ ರವರು ರಾಷ್ಟ್ರೀಯ ಲೋಕ್ ಅದಾಲತ್‌ನ ಪ್ರಯೋಜನವನ್ನು ಸಾರ್ವಜನಿಕರು ಹಾಗೂ ಕಕ್ಷಿದಾರರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.