ಆ.24 ರಂದು ನಗರದಲ್ಲಿ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ-ಸಂಸ್ಥೆಗಳ ಸಮ್ಮೇಳನ
ಕಲಬುರಗಿ,ಜು.27-ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ), ಬೆಂಗಳೂರು ಮತ್ತು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಹಯೋಗದೊಂದಿಗೆ ಆಗಸ್ಟ್ 24 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹೆಚ್‌ಕೆಇ ಸೊಸೈಟಿಯ ಪಿಡಿಎ ಇಂಜಿನಿಯರಿAಗ್ ಕಾಲೇಜಿನ ಆಡಿಟೋರಿಯಂನಲ್ಲಿ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಮತ್ತು ಕೆಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ ತಿಳಿಸಿದರು.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನದಲ್ಲಿ ಸುಮಾರು 350 ರಿಂದ 500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟನೆ ಮಾಡಲಿದ್ದು, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಮತ್ತು ಐಟಿ ಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಭೂತ ಸೌಕರ್ಯ ಸಚಿವ ಎಂ.ಬಿ.ಪಾಟೀಲ, ಶ್ರೀ ಶರಣಬಸಪ್ಪ ದರ್ಶನಾಪುರ, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಎಪಿಎಂಸಿ, ಜವಳಿ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳು ಹಾಗೂ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಉದ್ಘಾಟನಾ ಸಮಾವೇಶದ ನಂತರ ತಾಂತ್ರಿಕ ಅಧಿವೇಶನಗಳು ನಡೆಯಲಿದ್ದು ಕೈಗಾರಿಕಾ ನೀತಿ, ಹೂಡಿಕೆದಾರರ ಸಮಾವೇಶ ಮತ್ತು ಬಂಡವಾಳ ಹೂಡಲು ಇರುವ ಅವಕಾಶಗಳು, ಎಪಿಎಂಸಿ ನಲ್ಲಿನ ಸಮಸ್ಯೆಗಳು, ಕೌಶಲ್ಯ ತರಬೇತಿ ಮತ್ತು ಅವಕಾಶಗಳು ಇನ್ನೂ ಇತರ ವಿಷಯಗಳ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು ಈ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಈ ಸಮ್ಮೇಳನದ ಅಧಿವೇಶನದಲ್ಲಿ ನಡೆಯುವ ಚರ್ಚೆಗಳ ಕುರಿತ ಸಮಸ್ಯೆಗಳು ಮತ್ತು ಪರಿಹಾರಗಳನ್ನು ಕ್ರೋಢೀಕರಿಸಿ, ವರದಿಯನ್ನು ತಯಾರಿಸಿ ಸರ್ಕಾರದ ಗಮನಕ್ಕೆ ತಂದು ಮುಖ್ಯಮಂತ್ರಿಗಳು, ಜಿಲ್ಲೆಯ ಉಸ್ತುವಾರಿ ಸಚಿವರು, ಕೈಗಾರಿಕಾ ಸಚಿವರು ಮತ್ತು ಜಿಲ್ಲೆಯ ಶಾಸಕರುಗಳೊಂದಿಗೆ ಚರ್ಚಿಸಲಿದ್ದೇವೆ ಎಂದು ತಿಳಿಸಿದರು.