ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೨೭; ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ವ್ಯಸನ ಮುಕ್ತ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರದ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಹಾಗೂ ವ್ಯಸನ ಮುಕ್ತ ಶಿಬಿರ ಕಾರ್ಯಕ್ರಮ ಏರ್ಪಡಿಸುವ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.  ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 01ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂದು ಬೆಳಿಗ್ಗೆ 9ಕ್ಕೆ ನಗರದ ಒನಕೆ ಓಬವ್ವ ವೃತ್ತದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಏರ್ಪಡಿಸಬೇಕು. ಜಾಗೃತಿ ಜಾಥಾವು ಒನಕೆ ಓಬವ್ವ ವೃತ್ತದಿಂದ ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ ಬಳಿಯ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಆವರಣದವರೆಗೆ ನಡೆಸಿ, ಜಾಥಾ ಕಾರ್ಯಕ್ರಮದಲ್ಲಿ ಭಿತ್ತಿಪತ್ರ, ಜಾಗೃತಿ ಘೋಷವಾಕ್ಯಗಳ ಫಲಕಗಳನ್ನು ಪ್ರದರ್ಶಿಸಿ, ಜನರಲ್ಲಿ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ ತಿಂಗಳಿನಲ್ಲಿಯೇ ಒಂದು ಮದ್ಯ ವರ್ಜನ ಶಿಬಿರ ಏರ್ಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರಿಗೆ ಸೂಚನೆ ನೀಡಿದರು.ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮದ್ಯ ಮತ್ತು ಮಾದಕ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಆಗಸ್ಟ್ ತಿಂಗಳಿನಲ್ಲಿಯೇ ವಿಚಾರ ಸಂಕಿರಣ ಹಮ್ಮಿಕೊಳ್ಳುವಂತೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಿಳಿಸಿದರು.