ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ದೊರಕಬೇಕು
ಸಂಜೆವಾಣಿ ನ್ಯೂಸ್
ಮೈಸೂರು:ಜು.೨೬:- ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೇಟಿ ಬಚವೋ ಬೇಟಿ ಪಡಾವೋ ಅಭಿಯಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶ್ವೇತಾ ಮಾತನಾಡಿ, ಹೆಣ್ಣು ಮಕ್ಕಳಿಗೆ ಸಮಾನತೆ ದೊರಕುವಂತಾಗಬೇಕು, ಅಸಮಾನತೆ ನಿಲ್ಲಬೇಕು, ಹೆಣ್ಣು ಮಗುವಿಗೆ ಶಿಕ್ಷಣ ನೀಡಿದಾಗ ಇಡೀ ಕುಟುಂಬ ಮಾತ್ರವಲ್ಲ ಸಮಾಜದ ಉದ್ಧಾರ ಸಾಧ್ಯವಾಗುತ್ತದೆ. ಹೆಣ್ಣು ಮಕ್ಕಳಿಗೆ ಇನ್ನು ಹೆಚ್ಚು ಅವಕಾಶಗಳು ಸಿಕ್ಕಲ್ಲಿ ಮಹಿಳೆಯರು ತಮ್ಮ ಪ್ರತಿಭೆ ಹೊರಹಾಕಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಿಸಿದರು.
ಕಾಲೇಜಿನ ಪ್ರಾಂಶುಪಾಲೆ ಮಾನಸ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ನಾವು ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ ಮಹಿಳೆಯರು ಶಿಕ್ಷಣ, ಸಾಮಾಜಿಕ, ರಾಜಕೀಯ ಹಾಗೂ ಎಲ್ಲ ಕ್ಷೇತ್ರಗಳಲ್ಲೂ ಗಣನೀಯ ಸಾಧನೆ ಮಾಡಲು ಪ್ರೇರೇಪಿಸಬೇಕೆಂದು ತಿಳಿಸಿ, ಮೂಢನಂಬಿಕೆಗಳನ್ನು ಹೋಗಲಾಡಿಸಿ ವೈಚಾರಿಕತೆಯ ಹಿನ್ನೆಲೆಯಲ್ಲಿ ಪ್ರಜ್ಞಾವಂತರಾಗಿ ಮುನ್ನಡೆಯಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾಮಾಜಿಕ ಕಾರ್ಯಕರ್ತೆಯರು ಭಾಗವಹಿಸಿ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.