ಜಿ.ಪಂ, ತಾ.ಪಂ ಚುನಾವಣೆಗೆ ಸಜ್ಜಾಗಿ: ನಂದೀಶ್ ರೆಡ್ಡಿ
ಸಂಜೆವಾಣಿ ನ್ಯೂಸ್
ಮೈಸೂರು: ಜು.೨೪:- ಜಿ.ಪಂ, ತಾ.ಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು. ಹಾಗಾಗಿ ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಕ್ಷ ಗೆಲ್ಲುವುದಕ್ಕಾಗಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟಿತರಾಗಿ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ರೆಡ್ಡಿ ತಿಳಿಸಿದರು.
ಮಂಗಳವಾರ ನಗರದ ಬೋಗಾದಿ ವೃತ್ತದಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮೈಸೂರು ಗ್ರಾಮಾಂತರ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದ ಕೇಂದ್ರದ ನಾಯಕರು, ರಾಜ್ಯದಲ್ಲಿ ನಡೆಯುವ ಪ್ರತಿಯೊಂದು ಬೆಳವಣಿಗೆಯನ್ನೂ ಬಹಳ ಹತ್ತಿರದಿಂದ ಗಮನಿಸುತ್ತಿದ್ದಾರೆ. ಪ್ರತಿ ದಿನವೂ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ದೂರವಾಣಿ ಕರೆಗಳನ್ನು ಮಾಡುವ ಮೂಲಕ ಪಕ್ಷದ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆ ಮಾಡುತ್ತಿದ್ದಾರೆ. ಹಾಗಾಗಿ ಪಕ್ಷವನ್ನು ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ಪ್ರತಿಯೊಬ್ಬ ಕಾರ್ಯಕರ್ತರು, ಮುಖಂಡರ ಗುರಿಯಾಗಿರಬೇಕು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಂತಾಗಬೇಕು ಎಂದು ತಿಳಿಸಿದರು.
ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಆಡಳಿತ ಗಮನಿಸುತ್ತಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು ಮೋದಿಯವರು ಸಂಕಲ್ಪ ತೊಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಕಾರ್ಯಕರ್ತರು ಕೆಲಸ ಮಾಡಬೇಕು. ಆ.೧೫ರಿಂದ ೧೫ ದಿನಗಳ ಕಾಲ ಕಾರ್ಯಕರ್ತರು ತಮ್ಮ ಬೂತ್‌ಗಳ ವ್ಯಾಪ್ತಿಗೆ ಬರುವ ಪ್ರತಿ ಮನೆಗೂ ಹೋಗಬೇಕು. ಮತದಾರರನ್ನು ಮಾತನಾಡಿಸುವ ಮೂಲಕ ಅವರ ಮನ ಗೆಲ್ಲುವ ಪ್ರಯತ್ನ ಮಾಡಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಮಿತಿ ಮೀರಿದ ಭ್ರಷ್ಟಾಚಾರ, ಆಡಳಿತ ವೈಫಲ್ಯವನ್ನು ಜನರಿಗೆ ತಿಳಿಸಬೇಕು ಎಂದು ಸೂಚಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ರೂಗಳನ್ನು ಕೊಳ್ಳೆ ಹೊಡೆಯಲಾಗಿದೆ. ಇಷ್ಟೊಂದು ಹಣ ಹೊರ ರಾಜ್ಯಗಳಲ್ಲಿನ ಕೆಲವು ವ್ಯಕ್ತಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಗೊಳ್ಳುವುದಕ್ಕೆ ಬ್ಯಾಂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಸಂಬಂಧಿಸಿದ ವ್ಯಕ್ತಿಯ ಸಹಿ, ಅನುಮತಿಯಿಲ್ಲದೆ ೫ ಲಕ್ಷರೂಗೂ ಮೇಲ್ಪಟ್ಟ ಹಣವನ್ನು ಬ್ಯಾಂಕಿನವರು ಬೇರೆ ವ್ಯಕ್ತಿಗಳ ಖಾತೆಗೆ ಹಣ ವರ್ಗಾವಣೆ ಮಾಡುವುದಿಲ್ಲ ಎಂಬ ಸಾಮಾನ್ಯ ಅರಿವು ಕೂಡ ಸಿದ್ದರಾಮಯ್ಯನವರಿಗೆ ಇಲ್ಲವೇ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘುಕೌಟಿಲ್ಯ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ಕೇವಲ ಭ್ರಷ್ಟಾಚಾರ ಮಾಡಿ, ಕಮಿಷನ್ ದಂಧೆ ನಡೆಸಿ ಹಣ ಲೂಟಿ ಹೊಡೆದಿಲ್ಲ. ಅದರ ಬದಲಿಗೆ ಘಜನಿ ಮಹಮ್ಮದ್‌ನ ರೀತಿ ನೇರವಾಗಿ ೧೮೭ ಕೋಟಿ ರೂಗಳನ್ನು ಕೊಳ್ಳೆ ಹೊಡೆದಿದ್ದಾರೆ. ಎಸ್ಟಿ, ಎಸ್ಸಿಗಳ ಅಭಿವೃದ್ಧಿಗೆಂದು ಮೀಸಲಾಗಿಟ್ಟಿದ್ದ ೧೪ ಸಾವಿರ ಕೋಟಿ ರೂ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿವಿಧ ನಿಗಮ, ಮಂಡಳಿಗಳಿಗೆ ನೀಡಲಾಗಿದ್ದ ಅನುದಾನವನ್ನು ಕೂಡ ವಾಪಸ್ ಪಡೆದುಕೊಂಡಿದ್ದಾರೆ. ಹೀಗಾಗಿ ಇವುಗಳಿಂದ ಈಗ ಜನರಿಗೆ ಯಾವುದೇ ಸೌಲಭ್ಯಗಳು ಸಿಗದಂತಾಗಿದೆ. ಅಹಿಂದ ನಾಯಕ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ಈ ವರ್ಗದ ಜನರ ನಂಬಿಕೆ, ವಿಶ್ವಾಸಕ್ಕೆ ದ್ರೋಹ ಬಗೆದಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯವರು ಸಂವಿಧಾನ ವಿರೋಧಿಗಳು ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಾರೆ. ಆದರೆ ಸಂವಿಧಾನಕ್ಕೆ ೬೪ ಬಾರಿ ತಿದ್ದುಪಡಿ ಮಾಡಿದವರು ಕಾಂಗ್ರೆಸ್‌ನವರು. ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿ, ಸಂವಿಧಾನ, ಪ್ರಜಾಪ್ರಭುತ್ವದ ಕತ್ತನ್ನು ಹಿಸುಕಿದರು. ಹಾಗಾಗಿ ಕಾಂಗ್ರೆಸ್ ನಾಯಕರೇ ಸಂವಿಧಾನ, ಪ್ರಜಾಪ್ರಭುತ್ವದ ವಿರೋಧಿಗಳು ಎಂದು ತಿರುಗೇಟು ನೀಡಿದರು.
ಸಭೆಯಲ್ಲಿ ಬಿಜೆಪಿ ಮೈಸೂರು ವಿಭಾಗದ ಪ್ರಭಾರಿ ಮೈ.ವಿ.ರವಿಶಂಕರ್, ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್, ಮಾಜಿ ಶಾಸಕರುಗಳಾದ ಹರ್ಷವರ್ಧನ್, ಎನ್.ಬಾಲರಾಜು, ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರುಗಳಾದ ಎಸ್.ಮಹದೇವಯ್ಯ, ಹೇಮಂತ್‌ಕುಮಾರ್‌ಗೌಡ, ಪುಟ್ಟಬುದ್ಧಿ, ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷ ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಮಡವಾಡಿ, ಕಿರಣ್ ಜಯರಾಮೇಗೌಡ, ವಕ್ತಾರ ದಯಾನಂದ ಪಟೇಲ್, ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯಾಧ್ಯಕ್ಷ ಅನಿಲ್ ಥಾಮಸ್ ಮತ್ತಿತರರು ಉಪಸ್ಥಿತರಿದ್ದರು.