ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಿ.ಎಸ್.ಐ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ, ಆ.28: ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಿ.ಎಸ್.ಐ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ದರಬಾರ ಕಾಲೇಜಿನ ಸಭಾಂಗಣದಲ್ಲಿ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಿ.ಎಸ್.ಐ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ದತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ. 29ರÀಂದು ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ 12 ತಾಲೂಕುಗಳ 93 ಪರೀಕ್ಷೆ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಗೆ ಒಟ್ಟು 38,746 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂದು ಬೆಳಿಗ್ಗೆ 10-30 ಗಂಟೆಗೆಯಿಂದ 12-30ರ ವರೆಗೆ ಪರೀಕ್ಷೆ ಜರುಗಲಿದೆ ಎಂದರು.
ಪಿ.ಎಸ್.ಐ ಪರೀಕ್ಷೆಯು ಅಕ್ಟೋಬರ್ 3 ರಂದು 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 4,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10-30ರಿಂದ 12ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12-30ರಿಂದ ಮಧ್ಯಾಹ್ನ 2 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಫೋನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್‍ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯ ನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮರಗಳ ವೀಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು ಎಂದರು.
ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಲೋಪ ಕಂಡು ಬಂದಲ್ಲಿ ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಚಾಚೂ ತಪ್ಪದೆ ಕರ್ತವ್ಯ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರತಿ ಅಭ್ಯರ್ಥಿಯ ಮಧ್ಯೆ 2 ಮೀಟರ್ ಅಂತರವಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್‍ಚೇರ ಇಳಿಜಾರು ಸೌಲಭ್ಯ ಒದಗಿಸಬೇಕು. ಹಿಯರಿಂಗ್ ಏಯ್ಡ್ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳ ಗುರುತಿನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್ ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಅವರು ಗುರುತಿನ ಚೀಟಿ ಹೊಂದಿರಬೇಕು ಪರೀಕ್ಷಾ ದಿನಗಳಂದು ಸರ್ಕಾರದಿಂದ ಫೋಟೊ ಗುರುತಿನ ಚೀಟಿಯನ್ನು (ಆಧಾರ ಕಾರ್ಡ್, ಪ್ಯಾನ್ ಕಾರ್ಡ್, ರೇಶನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಮತದಾರರ ಗುರುತಿನ ಚೀಟಿ ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಪಾಸ್) ಬುಕ್) ತರುವುದು ಕಡ್ಡಾಯ ಎಂದು ಸೂಚಿಸಿದರು. ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿ.ಪಂ ಯೋಜನಾ ನಿರ್ದೇಶಕ ಸಿ.ಬಿ ದೇವರನಮÂ, ಜಿ.ಪಂನ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಎಲ್ಲ ತಾಲೂಕಿನ ತಹಶೀಲ್ದಾರರು, ಖಜಾನೆ ಇಲಾಖೆಯ ಉಪನಿರ್ದೇಶಕ ಹನಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಸಿ.ಕೆ.ಹೊಸಮನಿ, ಡಿ.ಡಿ.ಪಿ.ಐ ಎನ್.ಎಚ್ ನಾಗೂರ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಂಶುಪಾಲರು, ಪರೀಕ್ಷಾ ಕೇಂದ್ರಗಳ ವೀಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.