ವಿಮಾನ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ:ವ್ಯವಸ್ಥಾಪಕ ನಿರ್ದೇಶಕ ಡಾ. ಸತೀಶ ಸೂಚನೆ
ವಿಜಯಪುರ,ಜು.21:ವಿಜಯಪುರ ವಿಮಾನ ನಿಲ್ದಾಣದಲ್ಲಿ 24/7 ಕುಡಿಯುವ ನೀರು, 2ಸಾವಿರ ಕಿ.ವ್ಯಾ. ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕÀ ಡಾ. ಸತೀಶ ಬಿ.ಸಿ ಅವರು ಸೂಚಿಸಿದರು.
ಶನಿವಾರ ಬುರಣಾಪುರ ಹತ್ತಿರ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಟರ್ಮಿನಲ್ ಕಟ್ಟಡ, ಎಟಿಸಿ ಟಾವರ್, ಸಿಎಫ್‍ಆರ್ ಕಟ್ಟಡ, ಕಂಪೌಂಡ್ ಗೋಡೆ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿ ಪರಿಶೀಲನೆ ನಡೆಸಿದ ಅವರು, ನಂತರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ನಿಯಮಿತವಾಗಿ ಹಾಗೂ ನಿರಂತರವಾಗಿ ವಿಮಾನ ನಿಲ್ದಾಣಕ್ಕೆ ವಿದ್ಯುತ್ ಪೂರೈಕೆ ಮಾಡುವ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಹಾಗೂ ಹೆಸ್ಕಾಂನ ಅಧಿಕಾರಿಗಳಿಗೆ ಕಾಲಮಿತಿಯೊಳಗೆ ಬಾಕಿ ಉಳಿದ ವಿದ್ಯುತ್ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಿರ್ವಹಿಸುವಂತೆಯೂ, ಯಾವುದೇ ಸಮಸ್ಯೆಗಳುಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ವಿಮಾನ ನಿಲ್ದಾಣಕ್ಕೆ ಬಿಎಸ್‍ಎನ್‍ಎಲ್ ಸಂಪರ್ಕ ಕಾಮಗಾರಿ ವಿಳಂಬ ಮಾಡದೇ ಶೀಘ್ರ ಪೂರ್ಣಗೊಳಿಸಬೇಕು. ನೀರು ಸರಬರಾಜುವಿಗೆ ಕ್ರಮ ಕೈಗೊಳ್ಳಬೇಕು. ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ ಆಗದಂತೆ ನಿರ್ವಹಿಸಿದ ಕಾಮಗಾರಿಗಳು ಹಾಗೂ ವಿದ್ಯುತ್ ಕಾಮಗಾರಿಗಳಿಗೆ ಎನ್‍ಓಸಿ ಪಡೆದುಕೊಳ್ಳಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಲೋಕೋಪಯೋಗಿ ಇಲಾಖೆಯೆ ಕಾರ್ಯನಿರ್ವಾಹಕ ಅಭಿಯಂತರÀ ರಾಜು ಮುಜುಮದಾರ ವಿಮಾನ ನಿಲ್ದಾಣ ಕಾಮಗಾರಿಯ ಪೂರ್ಣ ವಿವರಗಳನ್ನು ಸಭೆಯಲ್ಲಿ ಮಂಡಿಸಿದರು.
ಈ ಸಂದರ್ಭದಲ್ಲಿ ಕೆಎಸ್‍ಐಐಡಿಸಿ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ, ನಾಗರಿಕ ವಿಮಾನಯಾನ ಸಮಾಲೋಚಕÀ ಬಾಲಸುಬ್ರಮಣ್ಯ, ತಾಂತ್ರಿಕ ಸಲಹೆಗಾರ ಕಾಂತರಾಜು, ಲೋಕೋಪಯೋಗಿ ಇಲಾಖೆ ಬೆಳಗಾವಿ ವಿಭಾಗದ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಹೆಸ್ಕಾಂ ಅಧೀಕ್ಷಕÀ ಸಿದ್ದಪ್ಪ ಬಿಂಜಗೇರಿ, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಆರ್.ಎನ್.ಮಸಳಿ, ರವಿ ಪವಾರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಮೋದ ಹೊಟ್ಟಿ, ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಭಿಯಂತರ ಜಗದೀಶ ಜಾಧವ, ಇನ್ನಿತರ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.