ಲಕ್ಷ್ಮೀಪುರಂ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
ಸಂಜೆವಾಣಿ ನ್ಯೂಸ್
ಮೈಸೂರು:ಜು.21:- ನಗರದ ಲಕ್ಷ್ಮೀಪುರಂ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ವಿದ್ಯಾರ್ಥಿ ವೇದಿಕೆ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಪ್ರಸ್ತುತ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಗಣನೀಯ ಸಾಧನೆ ಮಾಡುತ್ತಿರುವುದು ಮೆಚ್ಚುವ ವಿಚಾರ ಎಂದು ಶ್ಲಾಘಿಸಿದರು.
ಓದಿನ ಜತೆಗೆ ಸಹಪಠ್ಯ ಚಟುವಟಿಕೆಗಳಾದ ಕ್ರೀಡೆ, ಸಾಹಿತ್ಯ, ಸಂಗೀತ, ನೃತ್ಯ, ಯೋಗ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತರಬೇತಿ ಹೊಂದಿ ಅದರಲ್ಲೂ ಕೂಡ ಯಶಸ್ಸನ್ನು ಗಳಿಸಬೇಕೆಂದು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮರಿಸ್ವಾಮಿ ಮಾತನಾಡಿ, ವಿದ್ಯಾರ್ಥಿ ವೃಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಪರಿಶ್ರಮ ಹಾಗೂ ತಾಳ್ಮೆ ಮುಖ್ಯ ಎಂದರು.
ಬನುಮಯ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜು ಮಾತನಾಡಿ, ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ತತ್ವಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದರು. ಕಾಲೇಜಿನ ಪ್ರಾಂಶುಪಾಲ ಟಿ.ಸಿ.ಸುದೀಪ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಹಿರಿಯ ಉಪನ್ಯಾಸಕ ಎನ್.ಎಸ್.ಪಶುಪತಿ ಇನ್ನಿತರರು ಹಾಜರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.