ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷರ ಅವಿರೋಧ ಆಯ್ಕೆ ಸರಿಯಲ್ಲ
ಕಲಬುರಗಿ,ಜು.20-ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷರ ಅವಿರೋಧ ಆಯ್ಕೆಗೆ ಪಾಳಾದ ಗುರುಮೂರ್ತಿ ಶಿವಾಚಾರ್ಯರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಮುಖಂಡ ಎಂ.ಎಸ್.ಪಾಟೀಲ ನರಿಬೋಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಾಸಭಾದ ಜಿಲ್ಲಾ ಘಟಕ, ತಾಲ್ಲೂಕ ಘಟಕ ಮತ್ತು ರಾಜ್ಯ ಘಟಕದ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವುದು ಸೂಕ್ತವಲ್ಲ. ಚುನಾವಣೆ ನಡೆಸುವುದರ ಮೂಲಕ ಆಯ್ಕೆ ಮಾಡುವುದು ಅತ್ಯಂತ ಸೂಕ್ತವಾದುದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಮಹಾಸಭಾದ ತಾಲ್ಲೂಕ ಘಟಕದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಅದೇ ರೀತಿ ಜಿಲ್ಲಾ, ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿ. ಇದರಿಂದ ಮಹಾಸಭಾದ ಸದಸ್ಯರು ಚುನಾವಣೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸೂಕ್ತವಾದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಈ ಕಾರಣಕ್ಕಾಗಿ ಚುನಾವಣೆ ನಡೆಸುವುದರ ಮೂಲಕವೇ ಮಹಾಸಭಾದ ಎಲ್ಲಾ ಘಟಕಗಳ ಅಧ್ಯಕ್ಷರ ಆಯ್ಕೆ ನಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.