ಕಾನೂನು ಪಾಲನೆಯಿಂದ ನೆಮ್ಮದಿಯ ಜೀವನ
ಕೋಲಾರ,ಜು,೧೮- ಮನುಷ್ಯನ ಜೀವನದಲ್ಲಿ ಇಂದು ಆಹಾರ,ನೀರಿನಷ್ಟೇ ಕಾನೂನು ಅತಿ ಮುಖ್ಯವಾಗಿದ್ದು, ದೈನಂದಿನ ಬದುಕಿಗೆ ಅಗತ್ಯವಾದ ಕನಿಷ್ಟ ಕಾನೂನುಗಳ ಅರಿವು ಪಡೆಯುವ ಮೂಲಕ ನೆಮ್ಮದಿಯ ಜೀವನ ನಡೆಸಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಲ್ಲೂಕಿನ ಕುಂಬಾರಹಳ್ಳಿಯ ಸಿ.ಮುನಿಸ್ವಾಮಿ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಮನುಷ್ಯ ಭ್ರೂಣದಿಂದ ಸಾಯುವವರೆಗೂ ಕಾನೂನಿನ ಅಡಿಯೇ ಬದುಕಬೇಕಾಗಿದೆ, ಕಾನೂನು ಪಾಲಿಸುವವರನ್ನು ಕಾನೂನು ರಕ್ಷಿಸುತ್ತದೆ ಎಂದ ಅವರು, ಇತ್ತೀಚೆಗೆ ಭ್ರೂಣಲಿಂಗ ಪತ್ತೆ, ಹೆಣ್ಣುಭ್ರೂಣ ಹತ್ಯೆಯಂತಹ ಅಪರಾಧಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ದ ನೀವು ಧ್ವನಿಯೆತ್ತಬೇಕು, ಪೊಲೀಸರಿಗೆ ತಿಳಿಸಬೇಕು ಎಂದರು.
ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಕಾಲೇಜಿನ ಆವರಣದಲ್ಲಿ ಅಥವಾ ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ಕಿವಿಮಾತು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಮುನೇಗೌಡ ಮಾತನಾಡಿ, ಶಾಲಾ ಕಾಲೇಜುಗಳಿಂದ ೨೦೦ ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸದರಿ ಕಾಯಿದೆಯಡಿ ನಿಷೇಧಿಸಲಾಗಿದ್ದು, ಪ್ರತಿ ಶಾಲೆ,ಕಾಲೇಜು ಬಳಿ ನಿಷೇಧದ ಕುರಿತು ನಾಮಫಲಕ ಹಾಕುವುದು ಕಡ್ಡಾಯವಾಗಿದೆ ಎಂದರು.
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ ವಿವಾದ ರಹಿತ ಜೀವನ ನಡೆಸಬಹುದು ಎಂದರು.
ಬಾಲ್ಯವಿವಾಹ ಸಮಾಜಕ್ಕೆ ಕಂಟಕವಾಗಿದೆ ಎಂದ ಅವರು ಇದರ ಸಂಪೂರ್ಣ ತಡೆಗೆ ವಿದ್ಯಾರ್ಥಿ ಸಯುದಾಯದ ಸಹಕಾರ ಅಗತ್ಯವಿದೆ, ನಿಮ್ಮ ಸುತ್ತಮುತ್ತ ಬಾಲ್ಯವಿವಾಹ ಆಗುತ್ತಿದ್ದರೆ ನೀವು ಕೂಡಲೇ ಶಾಲೆಯ ಮುಖ್ಯಶಿಕ್ಷಕರಿಗೆ ತಿಳಿಸಿ, ಸಹಾಯವಾಣಿಗೂ ಕರೆ ಮಾಡಿ ಎಂದು ಸಲಹೆ ನೀಡಿದರು.
ವಕೀಲರಾದ ಆರ್.ರಘುಪತಿಗೌಡ, ಬಾಲ್ಯವಿವಾಹ ನಿಷೇಧ ಕಾಯಿದೆ, ಬಾಲಕಾರ್ಮಿಕ ವಿರೋಧಿ ಕಾಯಿದೆ ಹಾಗೂ ಹಿರಿಯ ನಾಗರೀಕರ ಸಂರಕ್ಷಣಾ ಕಾಯಿದೆ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಎನ್‌ಎಎಲ್‌ಎಸ್‌ಎ ಸಹಾಯವಾಣಿ ೧೫೧೦೦ ಕುರಿತು ಮಾಹಿತಿ ನೀಡಲಾಯಿತು, ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ ವಹಿಸಿದ್ದು,ಶಾಲೆಯ ನಿರ್ದೇಶಕ ಸಿ.ಮಲ್ಲಿಕಾರ್ಜುನ, ಶಿಕ್ಷಣ ಸಂಯೋಜಕ ರಾಘವೇಂದ್ರ, ಮುಖ್ಯಶಿಕ್ಷಕ ಎಂ.ಜಿ.ಸುರೇಶ್, ಮತ್ತಿತರರು ಪಾಲ್ಗೊಂಡಿದ್ದರು.