ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರಕ್ಕೆ ಪತ್ರ:ಡಾ.ಪುರುಷೋತ್ತಮ ಬಿಳಿಮಲೆ
ಕಲಬುರಗಿ:ಜು.16: ರಾಜ್ಯದಲ್ಲಿ ಸರ್ಕಾರಿ-ಖಾಸಗಿ ವಲಯದಲ್ಲಿ ಗ್ರೂಪ್ ‘ಸಿ’ ಮತ್ತು ‘ಡಿ’ ಗುಂಪಿನ ಉದ್ಯೋಗಳನ್ನು ಸ್ಥಳೀಯ ಕನ್ನಡಿಗರಿಗರಿಂದಲೆ ತುಂಬಬೇಕೆಂಬ ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೆ ತರಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರೋಜಿನಿ ಮಹಿಷಿ ವರದಿಯಲ್ಲಿ ಗ್ರೂಪ್ ‘ಸಿ’ ಮತ್ತು ‘ಡಿ’ ಶೇ.100ರಷ್ಟು ಕನ್ನಡಿಗರಿಗೆ ಮೀಸಲಿರಿಸಬೇಕೆಂದು ಹೇಳಿದ್ದಾರೆ. ಅದರೆ ವಾಸ್ತವದಲ್ಲಿ ಅದು ಸಾಧ್ಯವಿಲ್ಲ. ಭಾರತದಲ್ಲಿ ಯಾವುದೇ ರಾಜ್ಯದಲ್ಲಿ ನಾಗರಿಕ ಹೋಗಿ ಕೆಲಸ ಮಾಡಲು ಅವಕಾಶವಿದೆ. ಹೀಗಾಗಿ ಶೇ.80-20ರ ಅನುಪಾತದಲ್ಲಿ ಕ್ರಮವಾಗಿ ಸ್ಥಳೀಯರಿಗೆ ಮತ್ತು ಹೊರ ರಾಜ್ಯದವರಿಗೆ ಉದ್ಯೋಗ ನೀಡಬಹುದೆಂದು ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಸರ್ಕಾರ ಮಾಡಲಿದೆ ಎಂದರು.
ಇಂದಿಲ್ಲಿ ನಡೆದ ಸಭೆಯಲ್ಲಿ ವಾಣಿಜ್ಯ-ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ, ಬ್ಯಾಂಕ್ ನಲ್ಲಿ ಉದ್ಯೋಗಿಗಳು ಕನ್ನಡದಲ್ಲಿ ವ್ಯವಹಾರ ಮಾಡುತ್ತಿಲ್ಲದ ಬಗ್ಗೆ ಚರ್ಚೆ ಮಾಡಿದೆ. ಮುಂದಿನ 3 ತಿಂಗಳಲ್ಲಿ ಕನ್ನಡ ನಾಮಪಲಕ ಅಭಿಯಾನ ರೂಪದಲ್ಲಿ ಮಾಡಲಾಗುವುದೆಂದು ಕಲಬುರಗಿ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ಕನ್ನಡ ಬಲ್ಲವರನ್ನು ಸಾರ್ವಜನಿಕ ಸಂಪರ್ಕ ಅಧಿಕಾರಿಯನ್ನಾಗಿ ನಿಯೋಜಿಸಲಾಗುವುದು ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳು ಪ್ರಾಧಿಕಾರದ ಗಮನಕ್ಕೆ ತಂದಿದ್ದಾರೆ ಎಂದರು.
ಶತಮಾನ ಕಂಡ ಶಾಲೆಗಳ ಅಭಿವೃದ್ಧಿಗೆ ಕ್ರಮ: ರಾಜ್ಯದಲ್ಲಿ ಸ್ವಾತಂತ್ರ್ಯ ಪೂರ್ವ ವಸಾಹತುಶಾಹಿಗಳ ವಿರೋಧದ ನಡುವೆಯೆ ಕನ್ನಡ ಕಂಪು ಹರಿಸಿದ ಶತಮಾನ ಕಂಡ ಸರ್ಕಾರಿ-ಖಾಸಗಿ ಕನ್ನಡ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ ಯೋಜನೆ ರೂಪಿಸುತ್ತದೆ. ಈ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿದ್ದು, 1910-1930 ರ ನಡುವೆ ಆರಂಭಿಸಿದ ಅಂದಾಜು 250 ಶಾಲೆಗಳಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದ್ದು, ಅ ನಿಟ್ಟಿನಲ್ಲಿ ಕೆಲಸ ಸಾಗಿದೆ ಎಂದರು.
ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಇದ್ದರು.