18ರಂದು ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಸಂಜೆವಾಣಿ ನ್ಯೂಸ್
ಮೈಸೂರು: ಜು.15:- ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ಜು.18 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜು.21ನೇ ತಾರೀಖಿನಂದು ರೈತ ಹುತಾತ್ಮ ದಿನದಂದು ನಿರಂತರವಾಗಿ ಚಳವಳಿ ಹಮ್ಮಿಕೊಂಡಿರುವ ಬಗ್ಗೆ ತೀರ್ಮಾನ ಮಾಡಿದ್ದೇವೆ. ಸರ್ಕಾರಿ ಅಂಕಿ ಅಂಶದ ಪ್ರಕಾರ ಶೇ.28ರಷ್ಟು ಮಳೆ ಪ್ರಮಾಣದ ಕೊರತೆ ಇದೆ.
ಡ್ಯಾಮ್ ಗಳು ಇನ್ನೂ ತುಂಬಿಲ್ಲ. ಈ ನಿಟ್ಟಿನಲ್ಲಿ ಪ್ರತಿ ದಿನ ಒಂದು ಟಿಎಂಸಿ ನೀರನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಇದಕ್ಕೆ ತಾರ್ಕಿಕ ಅಂತ್ಯವನ್ನು ಕಾಣಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ. ಸೋಮಣ್ಣ , ಶೋಭಾ ಕರಂದ್ಲಾಜೆ, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಎರಡು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ರೈತ ಹಿತವನ್ನು ಕಾಯುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು.
ಟ್ರಯಲ್ ಬ್ಲಾಸ್ಟ್ ಅವೈಜ್ಞಾನಿಕವಾಗಿದೆ ಎಂಬ ಹೋರಾಟಕ್ಕೆ ತಾತ್ಕಾಲಿಕ ವಿರಾಮಸಿಕ್ಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆಯಬೇಕು. ಭ್ರಷ್ಟಾಚಾರದಲ್ಲಿ ಕಳೆದ ಸರ್ಕಾರಕ್ಕೂ ಈಗಿನ ಕಾಂಗ್ರೆಸ್ ಸರ್ಕಾರಕ್ಕೂ ವ್ಯತ್ಯಾಸ ಇಲ್ಲ. ಕಾಂಗ್ರೆಸ್ ಸರ್ಕಾರ ಎಸ್.ಟಿ.ನಿಗಮದ 187ಕೋಟಿ ಹಗರಣ ಮಾಡಿದೆ ಎಂದು ಕಿಡಿಕಾರಿದರು.
ಕೃಷಿ ಬೆಲೆ ಆಯೋಗದ ಸಬಲೀಕರಣ ಕಡೆ ಗಮನ ಕೊಡ್ತಾ ಇಲ್ಲ. ಕೃಷಿ ಬೆಲೆ ಆಯೋಗದ ನಿರ್ಮಾಣ ಆಗಿಲ್ಲ. ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿಲ್ಲ. ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಸಂಪೂರ್ಣವಾಗಿ ತಿದ್ದುಪಡಿ ಮಾಡಿಲ್ಲ. ಸ್ವಲ್ಪ ಆಶಾದಾಯಕವಾಗಿದೆ ಅಷ್ಟೇ. ರೈತರ ಆತ್ಮಹತ್ಯೆ ತಡೆಯುವ ಸಲುವಾಗಿ ಸರ್ಕಾರ ಮುಂದಾಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿ ಇದೆ. 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ರೈತರ ಆತ್ಮಹತ್ಯೆ ತಡೆಗಟ್ಟಲು ರೈತಪರ ಕಾರ್ಯಕ್ರಮ ರೂಪಿಸಿ ಆತ್ಮಸ್ಥೈರ್ಯ ತುಂಬಬೇಕು. ಕೃಷಿ ಉತ್ಪನ್ನಗಳಿಗೆ ಎಂಎಸ್ ಪಿ ನಿಗದಿ ಮಾಡಿ ಖರೀದಿಸಬೇಕು. ಕೃಷಿಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವತಃ ರೈತರು ಭರಿಸುವ ತೀರ್ಮಾನ ವಾಪಸ್ ಪಡೆಯಬೇಕು. ಮೈಸೂರು ತಾಲ್ಲೂಕಿನ ಕೋಚನಹಳ್ಳಿ ರೈತರಿಗೆ ಮೋಸ ಮಾಡಿರುವ ಭೂ ಮಾಫಿಯ ಕುಳಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಎಂದು ಆಗ್ರಹಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಸನ್ನ ಎನ್.ಗೌಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.