ಎಸ್‍ಸಿ, ಎಸ್‍ಟಿ ಅನುದಾನ ಬಳಕೆಗೆ ಖಂಡನೆ
ಸಂಜೆವಾಣಿ ನ್ಯೂಸ್
ಮೈಸೂರು: ಜು.14:- ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಎಸ್‍ಸಿ, ಎಸ್‍ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ಒಕ್ಕೂಟ ಶುಕ್ರವಾರ ಪ್ರತಿಭಟನೆ ನಡೆಸಿದರು.
ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ದಲಿತರಿಗೆ ಮೀಸಲ್ಲಿಟ್ಟಿರುವ ಎಸ್‍ಸಿಪಿ-ಟಿಎಸ್‍ಪಿ ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಲ್ಲದೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೇ.60ಕ್ಕಿಂತ ಹೆಚ್ಚಿನ ಅಂಕ ಪಡೆದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪೆÇ್ರೀತ್ಸಾಹ ಧನವನ್ನು ಪ್ರಸಕ್ತ ಸಾಲಿನಿಂದ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವಂತೆ ಆದೇಶ ಹೊರಡಿಸಿದ್ದು ಇಂದರಿಂದಾಗಿ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾಲೇಜುಗಳ ಪ್ರವೇಶಾತಿ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಂಗಡ ಶುಲ್ಕ ಕಟ್ಟದೆಯೇ ಪ್ರವೇಶ ಪಡೆಯಬಹುದು ಎಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಎಷ್ಟು ಕಾಲೇಜುಗಳಲ್ಲಿ ಜಾರಿ ಮಾಡಲಾಗಿದೆ? ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ದಲಿತ ವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಚಿನ್, ಪದಾಧಿಕಾರಿಗಳಾದ ನವೀನ್ ಕೋಳೂರು, ಗಿರೀಶ್ ಬೆಂಡರವಾಡಿ, ಮುತ್ತುರಾಜ್, ರೋಹಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.