ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಮುಂದೆ ಎಬಿವಿಪಿ ಪ್ರತಿಭಟನೆ
ಸಂಜೆವಾಣಿ ವಾರ್ತೆ
ದಾವಣಗೆರೆ. ಜು.೧೨: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ  ಜಾರಿ ಮಾಡುವುದು ಸೇರಿದಂತೆ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸುವಂತೆ ಆಗ್ರಹಿಸಿ ನಗರದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಪ್ರತಿಭಟನೆ ನಡೆಸಿತು.ನಗರದ ಎಂಸಿಸಿ ಬಿ ಬ್ಲಾಕಿನಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸಚಿವರಿಗೆ ಮನವಿ ಸಲ್ಲಿಸಿ ರಾಜ್ಯದಲ್ಲಿರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.ಎಲ್ಲ ಕ್ಷೇತ್ರಗಳಿಗೂ ಉತ್ತಮವಾದ, ವಿದ್ಯಾವಂತ, ಕೌಶಲ್ಯ, ಪ್ರಾಮಾಣಿಕ ವ್ಯಕ್ತಿಗಳನ್ನು ನೀಡುವ ಕ್ಷೇತ್ರ ಶಿಕ್ಷಣ ಕ್ಷೇತ್ರ, ರಾಜ್ಯ ಮತ್ತು ದೇಶದ ಅಭಿವೃದ್ಧಿ ಶಿಕ್ಷಣ ಕ್ಷೇತ್ರದ ಮೇಲೆ ನಿಂತಿರುತ್ತದೆ, ಆ ಕ್ಷೇತ್ರಕ್ಕೆ ಎಲ್ಲ ಸೌಲಭ್ಯವನ್ನು ಕೊಡುವುದು ಸರ್ಕಾರಗಳ ಮೊದಲ ಆದ್ಯತೆಯಾಗಬೇಕು, ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಶಾಲಾ-ಕಾಲೇಜುಗಳು ಪ್ರಾರಂಭವಾದ ನಂತರ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಪ್ರವೇಶಾತಿ ನೀಡುವಂತಾಗಬೇಕು.ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯದಲ್ಲಿ ಬಸ್ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು ಎಂದು  ಆಗ್ರಹಿಸಿದರು.ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿಯನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಸೂಚಿಸಬೇಕು. ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು. ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಕೆ.ವರುಣ್, ಡಿ.ಕೆ.ನವೀನ್, ಮಂಜುನಾಥ ಕೊಳ್ಳೇರ ಸೇರಿದಂತೆ ಇತರರು ಇದ್ದರು.