ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಸಲು ಮನವಿ
ಸಂಜೆವಾಣಿ ವಾರ್ತೆ
ದಾವಣಗೆರೆ.ಜು.೧೩: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಕೋರಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳ ನಿಯೋಗವು ತೆರಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಮನವಿ ಸಲ್ಲಿಸಿದರು.ಪ್ರಮುಖವಾಗಿ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಬೇಕು. ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ.27.50ಕ್ಕೆ ಹೆಚ್ಚಿಸಿ ಕಾಲ್ಪನಿಕವಾಗಿ 2022 ರ ಜುಲೈ ೧ ರಿಂದ ಅನ್ವಯ ವಾಗುವಂತೆ ವೇತನ ನಿಗದಿಪಡಿಸಿ, 2024 ರ ಏಪ್ರಿಲ್‌ ೧  ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವಂತೆ ಮನವಿ ಮಾಡಿದರು.ಎರಡನೆಯದಾಗಿ ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುಬೇಕು. ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರ ವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್‌ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಹಾಗೂ ಮೂರನೇಯದಾಗಿ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸುವುದಾಗಿದೆ.ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು 2022ರ ಸೆಪ್ಟೆಂಬರ್ 05 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ.ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ನೌಕರರಿಗೆ ಆರ್ಥಿಕ ಹೊರೆ ಯಾಗುತ್ತಿರುವುದರಿಂದ ಶೀಘ್ರವಾಗಿ ಯೋಜನೆಯನ್ನು ಲೋಕಾರ್ಪಣೆ ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.ರಾಜ್ಯ ಸರ್ಕಾರಿ ನೌಕರರ ಮೇಲ್ಕಂಡ ಈ ಮೂರು ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸುವಲ್ಲಿ ಈಗಾಗಲೇ ತುಂಬಾ ವಿಳಂಬವಾಗಿರುವುದರಿಂದ, ಶೀಘ್ರ ಸರ್ಕಾರಿ ಆದೇಶ ಹೊರಡಿಸಿ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ದಾವಣಗೆರೆ ಜಿಲ್ಲೆಯ ಸಮಸ್ತ ನೌಕರರರು ಹಾಗೂ ಕುಟುಂಬದವರ ಪರವಾಗಿ ಮನವಿ ಮಾಡುವುದಾಗಿ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ತಿಳಿಸಿದರು.ಈ ಸಂದರ್ಭದಲ್ಲಿ  ಜಿಲ್ಲಾ ಕಾರ್ಯದರ್ಶಿ ಸಿ. ಗುರುಮೂರ್ತಿ ಹಾಗೂ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.