ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಸಚಿವ ಖರ್ಗೆ ಕಚೇರಿಗೆ ವಿದ್ಯಾರ್ಥಿಗಳ ಮುತ್ತಿಗೆ: ಮಾತಿನ ಚಕಮಕಿ
ಕಲಬುರಗಿ:ಜು.12: ಹಲವಾರು ಶೈಕ್ಷಣಿಕ ಸಮಸ್ಯೆಗಳಾದ ಹಾಸ್ಟೆಲ್, ಬಸ್ಸಿನ ಸಮಸ್ಯೆ, ವಿಶ್ವವಿದ್ಯಾಲಯಗಳ ಏಕರೂಪ ವೇಳಾಪಟ್ಟಿ ಹಾಗೂ ವಿದ್ಯಾರ್ಥಿ ವೇತನ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್, ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಹನುಮಂತ್ ಬಗಲಿ ಅವರು ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಿಗೂ ಉತ್ತಮವಾದ, ವಿದ್ಯಾವಂತ, ಕೌಶಲ್ಯವುಳ್ಳ, ಹಾಗೂ ಪ್ರಾಮಾಣಿಕ ವ್ಯಕ್ತಿಗಳನ್ನು ನೀಡುವ ಕ್ಷೇತ್ರ ಶಿಕ್ಷಣ ಕ್ಷೇತ್ರ, ಮುಂದಿನ ಹತ್ತಾರು ವರ್ಷದ ರಾಜ್ಯ ಮತ್ತು ದೇಶದ ಅಭಿವೃದ್ಧಿ ಶಿಕ್ಷಣ ಕ್ಷೇತ್ರದ ಮೇಲೆ ನಿಂತಿರುತ್ತದೆ. ಆ ಕ್ಷೇತ್ರಕ್ಕೆ ಎಲ್ಲ ಸೌಲಭ್ಯವನ್ನು ಕೊಡುವುದು ಸರ್ಕಾರಗಳ ಮೊದಲ ಆದ್ಯತೆಯಾಗಬೇಕು. ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ನೀಡುತ್ತಿಲ್ಲ ಎಂದು ದೂರಿದರು.
ಸ್ತ್ರೀ ಶಕ್ತಿ ಯೋಜನೆಯಿಂದ ಅತಿ ಹೆಚ್ಚು ಮಹಿಳೆಯರು ಬಸ್‍ಗ ಳಲ್ಲಿ ಓಡಾಟ ಮಾಡುತ್ತಿರುವದರಿಂದ ಬಸ್‍ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ವಿದ್ಯಾರ್ಥಿಗಳು ದಿನನಿತ್ಯ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ದೃಷ್ಟಿಯಿಂದ ವಿದ್ಯಾರ್ಥಿ ವೇತನವನ್ನು ನೀಡುವುದು ಸರ್ಕಾರಗಳ ಕರ್ತವ್ಯ, ಆದರೆ ಕಳೆದ ವರ್ಷದ ವಿದ್ಯಾರ್ಥಿ ವೇತನವು ವಿದ್ಯಾರ್ಥಿಗಳಿಗೆ ಸರಿಯಾಗಿ ಜಮೆಯಾಗದೆ ಇರುವುದು, ಶಾಲಾ ಕಾಲೇಜುಗಳು ಪ್ರಾರಂಭವಾದ ಒಂದು ತಿಂಗಳ ನಂತರ ಹಾಸ್ಟೆಲ್‍ಗಳ ಅರ್ಜಿಯನ್ನು ಪ್ರಾರಂಭ ಮಾಡಿ, ಪ್ರವೇಶಾತಿ ಪ್ರಕ್ರಿಯೆ ಮುಗಿಯುವುದರೊಳಗೆ ಮೂರು ತಿಂಗಳುಗಳ ಕಾಲ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಗದೇ ಇರುವುದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‍ಗಳ ಸಂಖ್ಯೆ ಇರದೇ ಇರುವುದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ಬದಲಾವಣೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‍ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ, ಶಾಲಾ- ಕಾಲೇಜುಗಳು ಪ್ರಾರಂಭವಾದ ನಂತರ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಪ್ರವೇಶಾತಿ ನೀಡುವಂತೆ, ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯದಲ್ಲಿ ಬಸ್‍ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ, ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ, ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿಯನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಅವರು ಒತ್ತಾಯಿಸಿದರು.
ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ದೊರಕಿಸುವಂತೆ, ಹಾಸ್ಟೆಲ್‍ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡುವಂತೆ ಹಾಗೂ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಾಸ್ಟೆಲ್‍ಗಳಿಗೆ ಸ್ವಂತ ಕಟ್ಟಡವನ್ನು ನೀಡುವಂತೆ, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ಅನುದಾನದಿಂದ ಹಲವಾರು ಸೌಲಭ್ಯಗಳನ್ನ ನೀಡಲಾಗುತ್ತದೆ, ಅನುದಾನವನ್ನ ಬೇರೆ ಕಡೆ ಬಳಕೆ ಮಾಡಿರುವ ಕುರಿತು ಸರ್ಕಾರ ಸ್ಪಷ್ಟತೆ ನೀಡುವಂತೆ ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ್ ಹಂಜಗಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ, ರಾಷ್ಟ್ರೀಯ ಕಾರ್ಯಕಾರಿ ಸದಸ್ಯೆ ಭಾಗ್ಯಶ್ರೀ ಬೆಳೆ, ನಿತೀಶ್ ಕುಮಾರ್, ದಿಲೀಪ್, ಆದಿತ್ಯ, ಅಕ್ಷತಾ, ಶ್ರಾವಣ, ಶಿವರಾಜ್, ನಗರ ಕಾರ್ಯದರ್ಶಿ ಶಾಂತಕುಮಾರ್, ಕುಮಾರಿ ಅರುಣಾ, ರಕ್ಷಿತಾ, ತರುಣ್, ದಿಲೀಪ್ ಶರಣ್, ಮುತ್ತು ಮುಂತಾದವರು ಪಾಲ್ಗೊಂಡಿದ್ದರು.
ಆಪ್ತ ಸಹಾಯಕನೊಂದಿಗೆ ವಾಗ್ವಾದ: ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಾಗೂ ಸಚಿವರ ಆಪ್ತ ಸಹಾಯಕ ಮೋಹಿನ್ ಅವರೊಂದಿಗೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಕಾರರು ಮನವಿ ಪತ್ರ ಸಲ್ಲಿಸಿ, ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರಿಂದ ಉತ್ತರ ಬಯಸಿದರು. ಆಗ ಸಚಿವರು ಇಲ್ಲ. ನೀವು ಮನವಿ ಪತ್ರ ಸಲ್ಲಿಸಿದ್ದೀರಿ ಎಂದು ಆಪ್ತ ಸಹಾಯಕ ಹೇಳಿದಾಗ, ವಿದ್ಯಾರ್ಥಿಗಳು ಮನವಿ ಪತ್ರವನ್ನು ಹಲವಾರು ಬಾರಿ ಸಲ್ಲಿಸಿದ್ದೇವೆ. ಯಾವುದೇ ಪ್ರಯೋಜನ ಆಗಿಲ್ಲ. ಆ ಕುರಿತು ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.
ಸಚಿವರನ್ನು ದೂರವಾಣಿ ಮೂಲಕ ಮಾತನಾಡಿಸಲು ವಿದ್ಯಾರ್ಥಿಗಳು ಕೇಳಿಕೊಂಡರು. ಆದಾಗ್ಯೂ, ಆಪ್ತ ಸಹಾಯಕ ಅದಕ್ಕೆ ಒಪ್ಪದೇ ನೀವು ಪ್ರತಿಭಟನೆ ಮಾಡಿ ಎಂದು ಹೇಳಿದರು. ಇದರಿಂದಾಗಿ ವಿದ್ಯಾರ್ಥಿಗಳು ಆಪ್ತ ಸಹಾಯಕನ ವಿರುದ್ಧ ಆಕ್ರೋಶ ಹೊರಹಾಕಿದರು.