ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು
ಕಲಬುರಗಿ,ಜು.12-ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ.
ದೀಪಕ್ ಕಲ್ಯಾಣಿ ಎಂಬಾತ ಕಾಲೇಜಿನಿಂದ ಮನೆಗೆ ಹೊರಟಿದ್ದ ಬಾಲಕಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಸಂಬಂಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗ್ರಾಮೀಣ ಸಿಪಿಐ ವಿ.ನಾರಾಯಣ ಅವರು ಪ್ರಕರಣದ ತನಿಖೆ ನಡೆಸಿ ಪೋಕ್ಸೋ ಕಾಯ್ದೆ ಅಡಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ.ದಂಡ ವಿಧಿಸಿ ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ 7 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.