ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಜನಜಾಗೃತಿ ರ್ಯಾಲಿಗೆ ಚಾಲನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಜು.12: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ ತಾಲೂಕಾ ಆರೋಗ್ಯಾಧಿಕಾರಿಗಳ ಹಾಗೂ ವಿವಿಧ ನರ್ಸಿಂಗ್ ಕಾಲೇಜಗಳು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಸಿದ್ದೇಶ್ವರ ದೇವಸ್ಥನದಿಂದ ಏರ್ಪಡಿಸಿದ ಜಿಲ್ಲಾಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯ ಜನಜಾಗೃತಿ ರ್ಯಾಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ. ಚನ್ನಮ್ಮ ಕಟ್ಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳಿ ಅವರು ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ. ಚನ್ನಮ್ಮ ಕಟ್ಟಿ ಅವರು ಮಾತನಾಡಿ, ಮಿತಿ ಮೀರಿದ ಜನಸಂಖ್ಯೆ ದೇಶದ ಅಭಿವೃದ್ದಿಗೆ ಮಾರಕವಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರಲ್ಲೂ ತಿಳುವಳಿಕೆ ಮೂಡಬೇಕು ಅಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳಿ ಅವರು ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ 1.55 ಕೋಟಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಪ್ರತಿ ವರ್ಷ 7.75 ಲಕ್ಷ ಜನಸಂಖ್ಯೆ ಹೆಚ್ಚವರಿಯಾಗುತ್ತಿದೆ. ಈ ವೇಗದಲ್ಲಿ ಜನಸಂಖ್ಯೆಯು ಬೆಳೆಯುತ್ತಿದ್ದರೆ ಭಾರತವು ಮುಂದಿನ 35 ವರ್ಷಗಳಲ್ಲಿ 200 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಲಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಸೂಕ್ತ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜನಜಾಗೃತಿ ರ್ಯಾಲಿಯು ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯಕ್ಕೆ ತೆರಳಿ ಕಾರ್ಯಕ್ರಮ ಮುಕ್ತಾಯಗೊಂಡಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡ್ಡಮನಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ. ಸಂಪತ್ತ ಗುಣಾರಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಮ್. ಕೊಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ರೇಖಾ ದಶವಂತ, ಸರ್ಕಾರಿ ನರ್ಸಿಂಗ್ ಕಾಲೇಜ ಬೋಧಕರು ಮತ್ತು ವಿವಿಧ ನರ್ಸಿಂಗ್ ಕಾಲೇಜಗಳ ಉಪನ್ಯಾಸಕರು ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.