ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಗ್ಯಾರಂಟಿ ಯೋಜನೆಗಳು ಸಮರ್ಪಕ ಅನುಷ್ಠಾನವಾಗಲಿ: ಶಿವಮೂರ್ತಿ ಕೆ.
ಸಂಜೆವಾಣಿ ವಾರ್ತೆ
ಹೊಸಪೇಟೆ (ವಿಜಯನಗರ) ಜು10: ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಅರ್ಹರಾದ ಪ್ರತಿಯೊಬ್ಬರಿಗೂ ಸಮರ್ಪಕವಾಗಿ ತಲುಪುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು  ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಮೂರ್ತಿ ಕೆ. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಕಕ್ಷತೆ ವಹಿಸಿ ಮಾತನಾಡಿದ ಅವರು ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಅಧಿಕಾರಿಗಳಲ್ಲಿ ಸೇವಾ ಮನೋಭಾವ ಇರಬೇಕು. ನಮ್ಮ ಸಮಾಜದಲ್ಲಿ ಇನ್ನು ಅನೇಕರು ಪ್ರಮುಖ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು  ಎಂದು ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಹಾಗೂ ಜಿಲ್ಲಾ ಮತ್ತು ತಾಲೂಕು ಸಮಿತಿಗಳಿಗೆ ಸೂಕ್ತವಾದ ಕಚೇರಿ ಹಾಗೂ ಪೀಠೋಪಕರಣಗಳ ಒದಗಿಸಬೇಕು ಎಂದು ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದು, ಇದಕ್ಕೆ ಕೂಡಲೇ ವ್ಯವಸ್ಥೆಯಾದಲ್ಲಿ ಕಾಲಕಾಲಕ್ಕೆ ಸಭೆ ನಡೆಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಿ ಸಲಹೆ ಸೂಚನೆಗಳ ಮೇರೆಗೆ ಕೆಲಸದಲ್ಲಿ ನಿರತರಾಗಲೂ ಅನುಕೂಲವಾಗುತ್ತದೆ ಎಂದು ಪ್ರಾಧಿಕಾರದ ಉಪಾಧ್ಯಕ್ಷರು ಮತ್ತು ಎಲ್ಲ ಸದಸ್ಯರ ಪರವಾಗಿ ಜಿಲ್ಲಾಡಳಿತಕ್ಕೆ ಮನವಿ ಮಾಡುವೆ ಎಂದು ಶಿವಮೂರ್ತಿ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾರ್ಯಪ್ರವೃತ್ತರಾಗಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕಾರ್ಯನಿರ್ವಹಿಸಲಾಗುತ್ತದೆ. ತಾಲೂಕುಮಟ್ಟದಲ್ಲಿನ ಅಧಿಕಾರಿಗಳೊಂದಿಗೆ ಸಹ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಾಧಿಕಾರದ ಸದಸ್ಯರು ನೀಡಿದ ಮನವಿಯಲ್ಲಿನ ಅಂಶಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ಬಡಾವಲಿ,  ಚಂದ್ರಪ್ಪ ಹುಲಿಕಟ್ಟಿ, ಕೆ.ಎಸ್. ಶಾಂತನಗೌಡ, ಸೊನ್ನದ ಗುರುಬಸವರಾಜ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಭಾಗ್ಯಲಕ್ಷ್ಮಿ ಭರಾಡ, ವೆಂಕಟರಮಣ ಡಿ., ಎಂ.ದಾದಾಪೀರ್, ಜೀಲನ್, ಬಸವರಾಜ್ ಗೌಡ್ರ, ಎಲ್.ಚಂದ್ರನಾಯ್ಕ್, ಗುರುವಿನ ರವೀಂದ್ರ, ದೇವರಾಜ್ ಪಿ.ಹೆಚ್., ಪರಶುರಾಮ್, ಪಾಲ್ಗೊಂಡಿದ್ದರು., ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ನಾಯಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಲಕ್ಷ್ಮಿ, ಜೆಸ್ಕಾಂನ ಕಾರ್ಯಪಾಲಕ ಅಭಿಯಂತರರಾದ ತೇಜನಾಯ್ಕ್, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿ ಆರ್.ಪಿ.ವಜಂತ್ರಿ, ಸಭೆಯಲ್ಲಿ ಹಾಜರಿದ್ದರು.