ಜು.೧೩ ಕ್ಕೆ‌ ರಾಷ್ಟ್ರೀಯ ಲೋಕ್ ಅದಾಲತ್
ಸಂಜೆವಾಣಿ ವಾರ್ತೆ
ದಾವಣಗೆರೆ. ಜು.೯; ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜು. 13 ರಾಷ್ಟ್ರೀಯ ಲೋಕ್ ಆದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆ ಮಾಹಿತಿ ನೀಡಿದರು.ನಗರದ ದೇವರಾಜ‌ ಅರಸು ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಲಯಗಳ‌  ಸಂಕೀರ್ಣದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು‌ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಆ ಪ್ರಕಾರವಾಗಿ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಲೋಕ್ ಆದಾಲತ್‌ನ್ನು ಆಯೋಜಿಸಲಿವೆ ಎಂದರು.ಈ ಲೋಕ್ ಆದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೊಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು(ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು ಎಂದರು.ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 40713 ಪೆಂಡಿಂಗ್ ಪ್ರಕರಣಗಳು ಬಾಕಿ ಇದ್ದು, ಇವುಗಳಲ್ಲಿ ಸುಮಾರು 8871 ಪ್ರಕರಣಗಳು ರಾಜೀಯಾಗಬಹುದಾದ ಪ್ರಕರಣಗಳೆಂದು ಗುರುತಿಸಲಾಗಿದೆ.ರಾಜಿ ಬಗ್ಗೆ ಅನುಕೂಲವಾಗಲಿ ಎಂದು ಎಲ್ಲಾ ನ್ಯಾಯಾಲಯಗಳಲ್ಲಿ ಪ್ರತೀ ದಿನ ನ್ಯಾಯಾಧೀಶರು ಮತ್ತು ಸಂಧಾನಕಾರರ ಸಮಕ್ಷಮ ರಾಜಿ ಪೂರ್ವ ಸಮಾಲೋಚನೆಗಳನ್ನು ಕೂಡ ಆಯೋಜಿಸಲಾಗಿದೆ ಎಂದರು.ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರನ್ನು ದೂರವಾಣಿ ಸಂಖ್ಯೆ 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂರವಾಣಿ ಸಂಖ್ಯೆ: 08192-296885, ಹೊನ್ನಾಳಿ ದೂರವಾಣಿ ಸಂಖ್ಯೆ 08188-251732, ಚನ್ನಗಿರಿ ದೂರವಾಣಿ ಸಂಖ್ಯೆ: 08189-229195 ಮತ್ತು ಜಗಳೂರು ದೂರವಾಣಿ ಸಂಖ್ಯೆ: 08196-227600 ಇವರನ್ನು ಸಂಪರ್ಕಿಸಬಹುದು ಎಂದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣ್ ಕುಮಾರ್ ಮಾತನಾಡಿ ಲೋಕ್ ಅದಾಲತ್ ಗೆ ಜಿಲ್ಲಾ ವಕೀಲರ ಸಂಘದಿಂದ ನಿರಂತರವಾಗಿ ಸಹಕಾರ ನೀಡುತ್ತಾ ಬಂದಿದೆ.ವಕೀಲರ ಸಂಘದಿಂದಲೂ ಲೋಕ್ ಅದಾಲತ್ ಗಳಲ್ಲಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.ಕಾನೂನು ಸೇವಾ ಪ್ರಾಧಿಕಾರ ರಾಜ್ಯದಲ್ಲಿ ಕಾನೂನು ಅರಿವು ನೆರವು ನೀಡುತ್ತಾ ಕಾರ್ಯಕ್ರಮ ಮಾಡುತ್ತಾ ಬಂದಿದೆ.ಕಳೆದ ಹಲವಾರು ವರ್ಷದಿಂದ ದಾವಣಗೆರೆ ಜಿಲ್ಲೆಯಲ್ಲಿ ನಿರಂತರ ಕಾರ್ಯ ಮಾಡುತ್ತಾ ಬಂದಿದೆ.ಲೋಕ್ ಅದಾಲತ್ ನಿಂದ ಜನರ ಸಮಯ,ನ್ಯಾಯಾಲಯದ ಸಮಯ ಉಳಿತಾಯವಾಗುತ್ತದೆ ಎಂದರು.ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ ಕರಣ್ಣವರ,ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತ,ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಬಸವರಾಜ್ ಉಪಸ್ಥಿತರಿದ್ದರು.