ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, ಕಾಳಜಿ ಕೇಂದ್ರಗಳಲ್ಲಿ ಜನರಿಗೆ ಆಶ್ರಯ
ಕಾರವಾರ,ಜು.9: ಜಿಲ್ಲೆಯಲ್ಲಿ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲ್ಲೂಕಿನಲ್ಲಿ ತೆರೆಯಲಾದ 8 ಕಾಳಜಿ ಕೇಂದ್ರಗಳಲ್ಲಿ 313 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಮುನ್ನೆಚ್ಚರಿಕೆಯ ಕ್ರಮವಾಗಿ ಕುಮಟಾ ಹಾಗೂ ಹೊನ್ನಾವರ ತಾಲೂಕುಗಳಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬ0ಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ.
ಕದ್ರಾ ಜಲಾಶಯದಲ್ಲಿ ನೀರಿನ ಮಟ್ಟವು ಜಿಲ್ಲಾಡಳಿತ ನಿಗಧಿಪಡಿಸಿದ ಮಟ್ಟಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯದಿಂದ 10600 ಕೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ತೀವ್ರ ಹಾನಿ ಹಾಗೂ 13 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಎಂದವರು ಹೇಳಿದ್ದಾರೆ.
ಹೊನ್ನಾವರ ತಾಲ್ಲೂಕಿನ ಕಡತೋಕಾ ಗ್ರಾಮದ ಗುದ್ನಕಟ್ಟು ಮಜಿರೆಯು ನೀರಿನ ಹರಿವು ಜಾಸ್ತಿ ಆಗಿದ್ದು , ಇಲ್ಲಿನ ನೇರಪೀಡಿತ ಪ್ರದೇಶದಲ್ಲಿನ 60 ಜನರನ್ನು ಓಆಖಈ ತಂಡದ ಮೂಲಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.