ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಜು. 7: ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ, ಆಲ್ಕೋಳದ ಭಾರತೀಯ ಆಹಾರ ನಿಗಮ (ಎಫ್.ಸಿ.ಐ) ಕಚೇರಿ ಎದುರಿನ 100 ಅಡಿ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಅನಾಹುತದಿಂದ ಪಾರಾಗಿದ್ದಾರೆ. ಅವಘಡದ ನಂತರ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ.ವಿದ್ಯುತ್ ಕಂಬ ರಸ್ತೆಗೆ ವಾಲಿಕೊಂಡಿರುವುದರಿಂದ, ಸದರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮತ್ತೊಂದು ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲಿಸಿದ್ದಾರೆ.