ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್
ಸಂಜೆವಾಣಿ ವಾರ್ತೆ
ಬಳ್ಳಾರಿ,ಜು.06- ಬಳ್ಳಾರಿ ಜಿಲ್ಲೆಯಲ್ಲಿ ಜು.13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಕಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಾಗಿದೆ ಎಂದು ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ  ಹೇಳಿಧದಾರೆ.
ಅವರು  ಸುದ್ದಿಗೋಷ್ಠಿ ನಡೆಸಿ ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಈ ಲೋಕ್ ಅದಾಲತ್ ಸಹಾಯವಾಗಲಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 62,039 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 8,058 ಪ್ರಕರಣಗಳನ್ನು ಗುರುತಿಸಿದ್ದು, ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‍ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದು ಹೇಳಿದ್ದಾರೆ